ಡೆಂಗ್ಯೂ ಉಲ್ಬಣಗೊಳ್ಳದಂತೆ ಎಚ್ಚರ ವಹಿಸಿ

ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಶುಭಾಕಲ್ಯಾಣ್ ಸೂಚನೆ

28

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಂಭವ ಇರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ತಳಮಟ್ಟದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈಗಾಗಲೇ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಾಲೂಕು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಡೆಂಗ್ಯು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆಯಾದರೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿಲ್ಲ, ಡೆಂಗ್ಯೂ ಪ್ರಕರಣ ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ನಿರ್ದೇಶನ ನೀಡಿದರು.

ಡೆಂಗ್ಯು ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು, ಜನವಸತಿ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಮಳೆ ನೀರು ನಿಲ್ಲದಂತೆ ಕ್ರಮ ವಹಿಸಬೇಕು, ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳದೆ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು, ಅಧಿಕಾರಿಗಳು ಸಾರ್ವತ್ರಿಕ ರಜಾ ದಿನಗಳಲ್ಲಿಯೂ ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣದಲ್ಲಿ ಉದಾಸೀನ ತೋರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರು ಸೂಚಿಸಿದ್ದು, ಅದರನ್ವಯ ಬೇಜವಾಬ್ದಾರಿ ತೋರುವ ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲದೆ ಗೈರು ಹಾಜರಾದ ಕಾಲೇಜು ವಿದ್ಯಾರ್ಥಿಗಳ ಮೇಲೆಯೂ ನಿಗಾ ವಹಿಸಬೇಕು, ಸ್ವಯಂ ಸೇವಕರು ಹಾಗೂ ಆಶಾ ಕಾರ್ಯಕರ್ತರನ್ನು ಬಳಸಿಕೊಂಡು ಮನೆ- ಮನೆ ಸಮೀಕ್ಷೆ ಕೈಗೊಂಡು ವಾರಕ್ಕೊಮ್ಮೆ ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿದ ನೀರನ್ನು ಸ್ವಚ್ಛಗೊಳಿಸಿ ಒಣಗಿಸುವ ಮೂಲಕ ಒಣದಿನ ಆಚರಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು, ತೀವ್ರತರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ- ಚಿಕ್ಕ ಗುಳ್ಳೆಯ ಲಕ್ಷಣ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕೆಂಬ ಸಲಹೆ ಎಲ್ಲರಿಗೂ ತಲುಪಬೇಕೆಂದು ತಾಕೀತು ಮಾಡಿದರು.

ಯಾವುದೇ ಜನವಸತಿ ಪ್ರದೇಶದಲ್ಲಿ 1ಕ್ಕಿಂದ ಹೆಚ್ಚು ಡೆಂಗ್ಯೂ ಪ್ರಕರಣ ವರದಿಯಾದರೆ ಆ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದಾಗ ಮಾಹಿತಿ ನೀಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್ ಜಿಲ್ಲೆಯಲ್ಲಿ 1 ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ, ಜಿಲ್ಲೆಯಲ್ಲಿ ಪ್ರಸ್ತುತ 123 ಸಕ್ರಿಯ ಡೆಂಗ್ಯೂ ಪ್ರಕರಣಗಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 11 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6 ಮಂದಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಜನವರಿಯಿಂದ ಈವರೆಗೂ 419 ಪ್ರಕರಣಗಳಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರ್, ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಮಟ್, ತಹಶೀಲ್ದಾರ್ ಎಂ. ಸಿದ್ದೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!