33 ಗ್ರಂಥಾಲಯಗಳಿಗೆ ಗ್ರಂಥ ಪಾಲಕರ ಆಯ್ಕೆ: ಸಿಇಒ

18

Get real time updates directly on you device, subscribe now.


ತುಮಕೂರು: ಜಿಲ್ಲೆಯ ವಿವಿಧ ಗ್ರಂಥಾಲಯಗಳಲ್ಲಿ ಖಾಲಿ ಇದ್ದ ಗ್ರಂಥಪಾಲಕ ತಾತ್ಕಾಲಿಕ ಹುದ್ದೆಗೆ ಮೆರಿಟ್ ಮತ್ತು ಮೀಸಲಾತಿ ಅಧಾರದ ಮೇಲೆ ಹೊಸದಾಗಿ 33 ಜನರನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಗ್ರಂಥಪಾಲಕರ ಆಯ್ಕೆ ಸಂಬಂಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಖಾಲಿ ಇದ್ದ ಗ್ರಂಥ ಪಾಲಕರ ಹುದ್ದೆಗೆ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗೆ ಮೆರಿಟ್ ಮತ್ತು ಮೀಸಲಾತಿ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ, ಆಯ್ಕೆಯಾದ ಅಭ್ಯರ್ಥಿಗಳ ವಿವರಗಳನ್ನು 15 ದಿನಗಳ ಕಾಲ ಆಯಾ ಗ್ರಾಮ ಪಂಚಾಯಿತಿ ಸೂಚನಾ ಫಲಕಗಳಲ್ಲಿ ಅಳವಡಿಸಬೇಕು ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಭಾಗದ ಜನರ ಜ್ಞಾನಾರ್ಜನೆಯ ಮೂಲವಾದ ಗ್ರಂಥಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಹೊಸ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದ್ದು, ಸಾರ್ವಜನಿಕರು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರತಿ 3 ತಿಂಗಳಿಗೊಮ್ಮೆ ಗ್ರಂಥಪಾಲಕರ ಹುದ್ದೆ ಖಾಲಿ ಇರುವ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅನುಮತಿ ಇಲ್ಲದೆ 3 ದಿನಕ್ಕಿಂತ ಹೆಚ್ಚು ದಿನಗಳ ಕಾಲ ಕರ್ತವ್ಯಕ್ಕೆ ಹಾಜರಾಗದೆ ಹೋದಲ್ಲಿ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಪ್ರತಿ ಗ್ರಂಥಪಾಲಕರಿಗೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವಂತೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್, ನರೇಗಾ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ (ಆಡಳಿತ) ಹಾಲ ಸಿದ್ದಪ್ಪ ಪೂಜೇರಿ, ಉಪ ಕಾರ್ಯದರ್ಶಿ (ಅಭಿವೃದ್ಧಿ) ನರಸಿಂಹಮೂರ್ತಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!