ಪ್ರಾಸಿಕ್ಯೂಷನ್ ಅನುಮತಿ ವಾಪಸ್ ಪಡೆಯಿರಿ

ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

22

Get real time updates directly on you device, subscribe now.


ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರ ಕಾಂಗ್ರೆಸ್ ಘಟಕದ ವತಿಯಿಂದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಅನುಮತಿ ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದರು.
ನಗರದ ಜಿ.ಜಿ.ಎಸ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ರಾಜ್ಯಪಾಲರ ವಿರುದ್ದ ಘೋಷಣೆ ಕೂಗತ್ತಾ, ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮಾತನಾಡಿ, ಸಿದ್ದರಾಮಯ್ಯ ಓರ್ವ ಜನಾನುರಾಗಿ ಮುಖ್ಯಮಂತ್ರಿ ಸರ್ಕಾರದ ಯೋಜನೆಗಳ ಮೂಲಕ ಎಲ್ಲಾ ತಳಸ್ತರದ ಜನರಿಗೆ ಅನುಕೂಲ ಕಲ್ಪಿಸಿ, ನಾಡಿನ ಅಭಿವೃದ್ಧಿಯಲ್ಲಿ ಅವರು ಸಹ ಪಾಲುದಾರರಾಗುವಂತೆ ಮಾಡಿದ್ದರು, ಇದನ್ನು ಸಹಿಸದ ಕೆಲವರು ಕುತಂತ್ರ ಮಾಡಿ 2021- 22 ರಲ್ಲಿ ಬಿಜೆಪಿ ಪಕ್ಷದವರೆ ಅಧಿಕಾರದಲ್ಲಿದ್ದಾಗ ಹಂಚಿಕೆ ಮಾಡಿದ ಮುಡಾ ಬದಲಿ ನಿವೇಶನ ಹಂಚಿಕೆ ಮಾಡಿ ಈಗ ಮುಖ್ಯಮಂತ್ರಿಗಳ ಮೇಲೆ ಗೂಬೆ ಕೂರಿಸಲು ಹೊರಟಿದ್ದಾರೆ, 2023 ರ ಚುನಾವಣೆ ವೇಳೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಪ್ರಣಾಳಿಕೆ ನೀಡಿದ್ದ ಐದು ಗ್ಯಾರಂಟಿಗಳು ಈ ನಾಡಿನ ಬಡವರ ಪಾಲಿಗೆ ಭದ್ರತೆ ನೀಡಿವೆ, ಇದನ್ನು ಸಹಿಸಲಾಗದೆ ಈ ರೀತಿಯ ವಾಮಮಾರ್ಗದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾಗಿದ್ದಾರೆ, ಇದಕ್ಕೆ ಎಂದಿಗೂ ಪಕ್ಷದ ಕಾರ್ಯಕರ್ತರು ಅವಕಾಶ ಮಾಡಿಕೊಡುವುದಿಲ್ಲ, ಅವಶ್ಯವಿದ್ದರೆ ಎಂತಹ ಹೋರಾಟಕ್ಕೂ ಸಿದ್ಧ, ಕೂಡಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಡಿಸಿಸಿ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ, ಒಂದು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತ್ರವಾಗಿ ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಂಡು ಇನ್ನಿಲ್ಲದ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ, ಇಡೀ ಕಾಂಗ್ರೆಸ್ ಪಕ್ಷವಲ್ಲದೆ ಸಾರ್ವಜನಿಕರು ಸಹ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಸರ್ಕಾರ ಪತನಗೊಳಿಸಿ ವಾಮ ಮಾರ್ಗದಿಂದ ಅಧಿಕಾರ ಹಿಡಿಯುವ ಮೈತ್ರಿ ಪಕ್ಷಗಳ ಅಟಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.

ಮಾಜಿ ಶಾಸಕ ಡಾ.ಎಸ್.ರಫಿಕ್ ಅಹಮದ್ ಮಾತನಾಡಿ, 2023 ರಲ್ಲಿ ಅಪಾರ ಜನ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದು ಎರಡನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರು, ದೀನ ದಲಿತರು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುಕೂಲ ಮಾಡಿದರು, ಇದರಿಂದ ಹತಾಶೆಗೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಕಾಲದಲ್ಲಿ ಆಗಿರುವ ಹಗರಣವನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾಗಿದೆ, ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಶೋಷಿತ ಸಮುದಾಯಗಳ ಜನರು ಅಧಿಕಾರ ಹಿಡಿದ ಸಂದರ್ಭದಲ್ಲಿ ಇಲ್ಲಸಲ್ಲದ ಹಗರಣಗಳ ಹೆಸರಿನಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತಾ ಬಂದಿವೆ, ಎಸ್.ಬಂಗಾರಪ್ಪ, ವೀರಪ್ಪ ಮೊಯಿಲಿ ಸೇರಿದಂತೆ ಹಲವರು ಈ ಕುತಂತ್ರಕ್ಕೆ ಬಲಿಯಾಗಿದ್ದಾರೆ, ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರ ನಿಲ್ಲಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮಾತನಾಡಿ, ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ, ಇದೇ ವಿಚಾರವಾಗಿ ಆ. 21 ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಪಾಲರ ನಡೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಈ ಸಂಬಂಧ ಮನವಿಯನ್ನು ತಹಶಿಲ್ದಾರ್ ಸಿದ್ದೇಶ್ವರ್ ಅವರಿಗೆ ಸಲ್ಲಿಸಲಾಯಿತು, ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಸ್.ಷಫಿ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಫಯಾಜ್, ಪಾಲಿಕೆ ಮಾಜಿ ಸದಸ್ಯರಾದ ಇನಾಯತ್, ನಯಾಜ್ ,ಎನ್.ಮಹೇಶ್. ನಿಖೇತರಾಜ್ ಮೌರ್ಯ, ಮಾಜಿ ಮೇಯರ್ ಪ್ರಭಾವತಿ ಸುಧೀಶ್ವರ್, ಗುರುಪ್ರಸಾದ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!