ಜಲ್ ಜೀವನ್ ಪ್ರಧಾನಿಗಳ ಕನಸಿನ ಯೋಜನೆ

ಕಾಮಗಾರಿಗೆ ಸಂಬಂಧಿಸಿದಂತೆ ಡೀಸಿ ನೇತೃತ್ವದ ತನಿಖಾ ತಂಡ ರಚಿಸಿ: ವಿ.ಸೋಮಣ್ಣ

8

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲ್ ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನ ಒಳಗೊಂಡ ತನಿಖಾ ತಂಡ ರಚಿಸುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಕ್ಕೆ 7 ಸಾವಿರ ಕೋಟಿ ರೂ. ಹಣ ವಿನಿಯೋಗ ಮಾಡಲಾಗಿದ್ದು, ಜಿಲ್ಲೆಗೆ 2229 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಜಲ್ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 2019ರಿಂದ ಈವರೆಗೆ 3699 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 3000 ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವ ಮೂಲಕ 884 ಕಾಮಗಾರಿಗಳು ಪೂರ್ಣಗೊಂಡಿದ್ದು, 15 ಕಾಮಗಾರಿಗಳು ಪ್ರಗತಿಯಲ್ಲಿವೆ, ಶೀಘ್ರದಲ್ಲೇ 600 ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ಹಣ ಬಳಕೆಯಾಗಿದ್ದು, ಕಾಮಗಾರಿ ವಿಳಂಬಗೊಳ್ಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾಮಗಾರಿ ತೀವ್ರಗತಿಯಲ್ಲಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಂಡು 11 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಾಕಿ ಇರುವ ಬಿಲ್ಗಳನ್ನು ಪಾವತಿ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕನಾಯಕನ ಹಳ್ಳಿ, ಹುಳಿಯಾರು, ಬುಕ್ಕಾಪಟ್ಟಣ, ತುರುವೇಕೆರೆ ಸೇರಿದಂತೆ ಅಗತ್ಯಾನುಸಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರನ್ನೊಳಗೊಂಡಂತೆ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಹಿರಿಯ ಅಧಿಕಾರಿಗಳಿಂದ ಅಧೀನ ಅಧಿಕಾರಿಗಳ ನಿಯಂತ್ರಣ ಅವಶ್ಯಕವಾಗಿದ್ದು, ರೈತರ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಬೇಕು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ರೈತರ ತೋಟಗಳಿಗೆ ಕ್ಷೇತ್ರ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ನವಹದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, .ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಶಾಸಕ ಚಿದಾನಂದ ಎಂ. ಗೌಡ, ಸರ್ಕಾರದ ಕಾರ್ಯದರ್ಶಿ ಮಂಜುಳ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಪಂ ಸಿಇಒ ಜಿ.ಪ್ರಭು ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!