ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಬದ್ಧ

ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸಿ- ಬಿ.ಎಸ್.ಪಾಟೀಲ್

3

Get real time updates directly on you device, subscribe now.


ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮೇಲೆ ಕಾನೂನು ಕ್ರಮದ ಬಿಸಿ ಮುಟ್ಟಿಸಲು ಕರ್ನಾಟಕ ಲೋಕಾಯುಕ್ತ ಟೊಂಕ ಕಟ್ಟಿ ನಿಂತಿದೆ ಎಂದು ಕರ್ನಾಟಕದ ಗೌರವಾನ್ವಿತ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ರಾಜ್ಯದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಬದ್ಧವಾಗಿದೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಸರ್ಕಾರಿ ಕಚೇರಿ, ಆಸ್ಪತ್ರೆ, ವಿದ್ಯಾರ್ಥಿನಿಲಯ, ಗ್ರಾಮ ಪಂಚಾಯತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ, ಸರ್ಕಾರಿ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿ, ಸಿಬ್ಬಂದಿ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು ಎಂದು ಸೂಚನೆ ನೀಡಿದರು.
ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ, ಸ್ಥಳೀಯ ಸಂಸ್ಥೆಗಳು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆ ಒದಗಿಸಬೇಕು, ಸರ್ಕಾರದಿಂದ ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು, ವಿವಿಧ ಅಭಿವೃದ್ಧಿ ಯೋಜನೆಗಳಡಿ ಬಿಡುಗಡೆಯಾಗುವ ಕೋಟ್ಯಂತರ ರೂ. ಅನುದಾನವನ್ನು ಉದ್ದೇಶಿತ ಕಾಮಗಾರಿಗಳಿಗೆ ವಿನಿಯೋಗಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ಸ್ವಯಂ ಪ್ರೇರಿತವಾಗಿ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ರೈತರ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಪ್ರಯೋಜನಕ್ಕಾಗಿ ಹಿಂದಿನವರು ನಿರ್ಮಾಣ ಮಾಡಿರುವ ಕೆರೆ- ಕಟ್ಟೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೂ ಉಳಿಸುವಂತಹ ಕೆಲಸವನ್ನು ಅಧಿಕಾರಿಗಳು ಮಾಡಬೇಕು, ರಸ್ತೆ, ಶಾಲೆ, ಅಂಗನವಾಡಿ ಕಟ್ಟಡ, ಶೌಚಾಲಯ ನಿರ್ಮಾಣದಂತಹ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಅವ್ಯವಹಾರ ನಡೆಯಬಾರದು, ಸರ್ಕಾರದ ಅನುದಾನ ದುರ್ಬಳಕೆ ಮಾಡುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಸಾರ್ವಜನಿಕ ದೂರುಗಳು ಬರುತ್ತಲೇ ಇರುತ್ತವೆ, ದೂರಿನನ್ವಯ ಯಾವುದೇ ಅಧಿಕಾರಿ ಇರಲಿ ತನಿಖೆ ನಡೆಸಿ, ಅಕ್ರಮ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದು ಲೋಕಾಯುಕ್ತ ಶತಸಿದ್ಧವೆಂದು ನಿರ್ದೇಶನ ನೀಡಿದರು.
ಸಾರ್ವಜನಿಕ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದಲ್ಲಿ ಪೊಲೀಸ್, ಕಾನೂನು, ತಾಂತ್ರಿಕ, ಆಡಳಿತ ಶಾಖೆ ಸೇರಿ ಪ್ರತ್ಯೇಕ ಶಾಖೆಗಳಿದ್ದು, ಸಂಬಂಧಿಸಿದ ಶಾಖೆಗಳ ಅಧಿಕಾರಿಗಳು ಸ್ವೀಕೃತ ದೂರುಗಳ ಬಗ್ಗೆ ತನಿಖೆ ನಡೆಸಿ ಲೋಕಾಯುಕ್ತಕ್ಕೆ ವಿವರಣಾತ್ಮಕ ವರದಿ ನೀಡಲಿದ್ದಾರೆ, ವರದಿಯನ್ನಾಧರಿಸಿ ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಲ್ಲದೆ ಲೋಪ ಸರಿಪಡಿಸಲು ಸೂಕ್ತ ನಿರ್ದೇಶನ, ಸಲಹೆ ನೀಡಲಾಗುವುದು ಎಂದು ತಿಳಿಸಿದರು.

ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಯಾವುದೇ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದಲ್ಲಿ ಹುದ್ದೆಯಲ್ಲಿ ಮುಂಬಡ್ತಿ, ವೇತನ ಬಡ್ತಿ, ವಯೋ ನಿವೃತ್ತಿ ವೇತನದಿಂದ ವಂಚಿತರಾಗಬೇಕಾಗುತ್ತದೆ, ವೈಯಕ್ತಿಕ ಬದುಕಿನ ಮೇಲೂ ಪರಿಣಾಮ ಬೀರುತ್ತದೆ, ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ಪೂರಕವಾಗಿ ಕೆಲಸ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ, ಅಧಿಕಾರಿಗಳು ಜನರ ಶಾಪಕ್ಕೆ ಗುರಿಯಾಗಿ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡದೆ ಜಿಲ್ಲೆಯ ಬೆಳವಣಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು, ಎಸ್ ಪಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜಾ ಸೇರಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಲೋಕಾಯುಕ್ತ ಎಸ್ಪಿ ಎ.ವಿ.ಲಕ್ಷ್ಮಿನಾರಾಯಣ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!