ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಳ್ಳಲಿ

ಪ್ರಜಾ ಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿರಲಿ: ಡೀಸಿ

18

Get real time updates directly on you device, subscribe now.


ತುಮಕೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ 90 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 90 ಕಿ.ಮೀ. ಮಾನವ ಸರಪಳಿ ನಿರ್ಮಿಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಪ್ರಜಾ ಪ್ರಭುತ್ವದ ಮಹತ್ವವನ್ನು ಪ್ರತಿಯೊಬ್ಬ ನಾಗರಿಕನಿಗೂ ತಿಳಿಸುವ ಸಲುವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯಾದಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜ ನಗರದ ವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಮಾನವ ಸರಪಳಿಯನ್ನು ಏಕ ಕಾಲದಲ್ಲಿ ಆಯೋಜಿಸಲಾಗುತ್ತಿದೆ, ಜಿಲ್ಲೆಯ ಜನತೆ ಈ ಮಾನವ ಸರಪಳಿಯಲ್ಲಿ ಭಾಗವಹಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ತಿಳಿದುಕೊಳ್ಳುವಂತೆ ಮಾಡಬೇಕೆಂದು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯತಿ ಸಿಇಒ ಜಿ.ಪ್ರಭು ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗುವ ಮಾನವ ಸರಪಳಿಯಲ್ಲಿ 1 ಲಕ್ಷಕ್ಕಿಂತ ಹೆಚ್ಚಿನ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ, ಮಾನವ ಸರಪಳಿಯನ್ನು ವ್ಯವಸ್ಥಿತವಾಗಿ ನಿರ್ಮಿಸಲು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರಲ್ಲದೆ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಉಪನ್ಯಾಸಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ವಿಶ್ವ ಸಂಸ್ಥೆಯು ಘೋಷಿಸಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ನಿಯೋಜಿತ ಅಧಿಕಾರಿಗಳು ಪ್ರಜಾ ಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ಜಿಲ್ಲೆಗೆ ಶೋಭೆ ತರುವ ಕೆಲಸ ಮಾಡಬೇಕು ಎಂದರಲ್ಲದೆ ಮಾನವ ಸರಪಳಿ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಸೇರಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ದಿನಾಚರಣೆಯಂದು ತಾಲ್ಲೂಕು ಕೇಂದ್ರ ಹಾಗೂ ನಗರ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಸಂವಿಧಾನ ಕುರಿತು ಅರಿವು ಕಾರ್ಯಕ್ರಮ, ಮಾನವ ಸರಪಳಿ ನಿರ್ಮಿಸುವುದರೊಂದಿಗೆ ಸ್ಥಳೀಯವಾಗಿ ಗಿಡ ನೆಡುವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸುವ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಾಗಾಧಿಕಾರಿಗಳಾದ ಗೌರವ ಕುಮಾರ್ ಶೆಟ್ಟಿ ಹಾಗೂ ಸಪ್ತಶ್ರೀ, ಕೃಷಿ ಜಂಟಿ ನಿರ್ದೇಶಕ ಎನ್.ರಮೇಶ್, ತೋಟಗಾರಿಕೆ ಉಪ ನಿರ್ದೇಶಕಿ ಶಾರದಮ್ಮ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಹರ್ಷಕುಮಾರ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!