ತುಮಕೂರು: ಜಿಲ್ಲಾಡಳಿತದ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ತುಮಕೂರು ದಸರಾ ಉತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
ದಸರಾ ಮಹೋತ್ಸವದ ಪ್ರಯುಕ್ತ ಅ. 11 ಮತ್ತು 12 ರಂದು ನಗರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಎಲ್ಲ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲೆಯ ಸಾರ್ವಜನಿಕರು ಕುಟುಂಬ ಸಮೇತರಾಗಿ ಪಾಲ್ಗೊಳ್ಳಬೇಕು. ಈ ಮೂಲಕ ತುಮಕೂರು ದಸರಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ಕೋರಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಉತ್ಸವದ ಅಂಗವಾಗಿ ನಿರ್ಮಿಸಲಾಗಿರುವ ಡಾ.ಶಿವಕುಮಾರ ಸ್ವಾಮೀಜಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಚಾಮುಂಡೇಶ್ವರಿ ದೇವಿಯ ನಿತ್ಯದ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿ, ದಸರಾ ಮಹೋತ್ಸವದ ಪ್ರಯುಕ್ತ 7ನೇ ದಿನದ ಪೂಜೆಯೂ ಯಶಸ್ವಿಯಾಗಿ ನಡೆದಿದೆ, ಈಗಾಗಲೇ ದಸರಾ ಉತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ, ಇದೇ ರೀತಿ ಅ.11 ಮತ್ತು 12 ರಂದು ಚಿತ್ತಾಕರ್ಷಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಎಲ್ಲಾ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರು ಆಗಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು, ಗೃಹ ಸಚಿವ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ ಹಾಗೂ ದಸರಾ ಸಮಿತಿಯ ಸದಸ್ಯರು ಹಾಜರಿದ್ದರು.
Comments are closed.