ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20 ರಂದು 3 ದಿನ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ, ಲೋಕಾಯುಕ್ತ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ, ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ, ಜಿಲ್ಲೆಯಲ್ಲಿ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರಲ್ಲದೆ, ಈವರೆಗೆ ನೋಂದಣಿಯಾದ ದೂರು ಪ್ರಕರಣಗಳ ಮಾಹಿತಿ ಪಡೆದ ಅವರು ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ ಎಲ್ಲಾ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು, ಲೋಕಾಯುಕ್ತ ಪ್ರಕರಣ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಸೂಕ್ತ ಕಾರಣವನ್ನು ಉಪ ಲೋಕಾಯುಕ್ತರ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Comments are closed.