ತುಮಕೂರು: ಕನ್ನಡ ನಾಡು- ನುಡಿಗಾಗಿ ಶ್ರಮಿಸಿದ ಹೆಸರಾಂತ ಸಾಹಿತಿಗಳ ವಸ್ತು ಸಂಗ್ರಹಾಲಯ ಹಾಗೂ ಕಲಾ ಮಂದಿರದ ನಿರ್ಮಾಣ ಮಾಡುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಜಿಲ್ಲಾಡಳಿತ ವತಿಯಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು- ನುಡಿ ಕುರಿತು ಶುಕ್ರವಾರ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಸಾಹಿತಿಗಳು, ವಿಚಾರವಾದಿಗಳು, ಚಿಂತಕರು, ವಿಮರ್ಶಕರು, ವಿಶ್ಲೇಷಕರು ಒಂದೆಡೆ ಸೇರಿ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು, ಸಾಹಿತ್ಯ ಕ್ಷೇತ್ರ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚಿಂತನೆ, ಚರ್ಚೆ, ವಿಮರ್ಶೆ, ಟೀಕೆ- ಟಿಪ್ಪಣಿ ನಡೆಯಬೇಕು, ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆಗಳಾಗಬೇಕು ಎಂದು ತಿಳಿಸಿದರಲ್ಲದೆ ನಮ್ಮ ಕಾಲದಲ್ಲಿ ಶಾಲಾ- ಕಾಲೇಜು, ವಿಶ್ವ ವಿದ್ಯಾಲಯಗಳಿಂದ ಚರ್ಚಾ ಸ್ಪರ್ಧೆ ಏರ್ಪಡಿಸಿ ಗಂಭೀರ ವಿಷಯಗಳ ಬಗ್ಗೆ ಪರ- ವಿರೋಧದ ಚರ್ಚೆಗಳಾಗುತ್ತಿದ್ದವು, ಆದರೆ ಇತ್ತೀಚಿನ ದಿನಗಳಲ್ಲಿ ವಿಶ್ವ ವಿದ್ಯಾಲಯಗಳಲ್ಲಿಯೂ ಚರ್ಚೆ ನಡೆಯದಿರುವುದು ಉತ್ತಮ ಬೆಳವಣಿಗೆಯಲ್ಲ ಎಂದರು.
ಈ ಸಂದರ್ಭದಲ್ಲಿ ದಿಬ್ಬೂರು ಎಲ್.ಮಂಜಣ್ಣ ಮತ್ತು ತಂಡದಿಂದ ಕನ್ನಡಪರ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ತಹಶೀಲ್ದಾರ್ ರಾಜೇಶ್ವರಿ, ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಡಾ.ಬಾಲಗುರು ಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಪ್ರಸಿದ್ಧ ಸಾಹಿತಿ ಡಾ.ಕರೀಗೌಡ ಬೀಚನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮತ್ತಿತರರು ಪಾಲ್ಗೊಂಡಿದ್ದರು.
Comments are closed.