ತುಮಕೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯ ಹಳ್ಳಿ- ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆ, ಆದರೂ ಜನರಲ್ಲಿ ಇನ್ನೂ ಕಾನೂನು ಪ್ರಜ್ಞೆ ಬಂದಿಲ್ಲ, ಆದರೆ ಕಾನೂನು ಅರಿವಿದ್ದವರು ಕಾನೂನು ಉಲ್ಲಂಘನೆಯಲ್ಲಿ ತೊಡಗಿಕೊಳ್ಳುವುದು ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿಯುವ ಜೊತೆ ಜೊತೆಗೆ ಅನುಭವಾತ್ಮಕ ಕಲಿಕೆ ಹೊಂದಬೇಕು, ಕಾನೂನಿನ ವ್ಯಾಖ್ಯಾನ ಅರ್ಥ ಮಾಡಿಕೊಂಡಾಗ ಮಾತ್ರ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯ, ನ್ಯಾಯಾಲಯದಲ್ಲಿ ವಾದ ಮಂಡಿಸುವ ಮುನ್ನ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ, ಪುರಾವೆಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಸಿಗಬೇಕು, ಕಾನೂನು ಅರಿವಿನ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ, ಈ ನಿಟ್ಟಿನಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ ಎಂದು ತಿಳಿಸಿದರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎನ್.ಮುನಿರಾಜು ಮಾತನಾಡಿ, ಕಾನೂನು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು, ಭಾರತದ ಪ್ರತಿಯೊಬ್ಬ ಪ್ರಜೆಗೂ ಕಾನೂನು ಅರಿವು ಮೂಡಿಸುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವೆಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ 1780ರಲ್ಲಿ ಸ್ವಾತಂತ್ರ್ಯ ಪೂರ್ವ ಬ್ರಿಟಿಷ್ ಆಡಳಿತದಲ್ಲಿ ಲಾರ್ಡ್ ಕಾರ್ನ್ವಾಲಿಸ್ ಅವರ ನೇತೃತ್ವದಲ್ಲಿ ಕ್ರಿಮಿನಲ್ ಕೇಸ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಆರೋಪಿಗಳಿಗೆ ಉಚಿತ ಕಾನೂನು ನೆರವು ನೀಡುವ, 1949ರ ಬಾಂಬೆ ಕಮಿಟಿ, 1949ರ ಪಶ್ಚಿಮ ಬಂಗಾಳದ ಟ್ರೇವರ್ ಹ್ಯಾರಿಸ್ ಸಮಿತಿ, 1958ರ ಬಡವರಿಗೆ ಕೇರಳ ಕಾನೂನು ನೆರವು ನಿಯಮಗಳು, 1960ರ ಕೇಂದ್ರ ಸರ್ಕಾರದ ಯೋಜನೆ, 1962ರ ಮೂರನೇ ಭಾರತೀಯ ವಕೀಲರ ಸಮಾವೇಶ, 1987ರಲ್ಲಿ ಸವೋಚ್ಛ ನ್ಯಾಯಾಲಯ ಜಾರಿಗೆ ತಂದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಅನಂತ, ವಿವಿಧ ಕಾನೂನು ಕಾಲೇಜುಗಳ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಹಿರಿಯ ವಕೀಲರು, ಕಾನೂನು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Comments are closed.