ತುಮಕೂರು: ಜಿಲ್ಲೆಯ ಸಿರಿಧಾನ್ಯ ಬೆಳೆಯನ್ನು 10,000 ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2025ರ ಪ್ರಯುಕ್ತ ಕೃಷಿ ಇಲಾಖೆಯಿಂದ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆಯಲ್ಲಿ 3ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ ಭೂಮಿಯಲ್ಲಿ 6,000 ಹೆ. ಪ್ರದೇಶದಲ್ಲಿ ಮಾತ್ರ ಸಿರಿಧಾನ್ಯ ಬೆಳೆಯಲಾಗುತ್ತಿದ್ದು, ಅದನ್ನು 10,000 ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸಿರಿಧಾನ್ಯಗಳ ಬಳಕೆ, ಖರೀದಿಸುವವರ ಸಂಖ್ಯೆ ಕಡಿಮೆ ಇರುವುದರಿಂದ ಸಿರಿಧಾನ್ಯಕ್ಕೆ ಹೆಚ್ಚಿನ ಬೇಡಿಕೆಯಿಲ್ಲದೆ ರೈತರು ಸಿರಿಧಾನ್ಯ ಬೆಳೆಯಲು ಮುಂದಾಗುತ್ತಿಲ್ಲ, ಈ ನಿಟ್ಟಿನಲ್ಲಿ ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಸಲುವಾಗಿ 10,000 ರೂ. ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದರಲ್ಲದೆ ಸಿರಿಧಾನ್ಯ ಬಳಕೆ ಹೆಚ್ಚಿಸುವ ಸಲುವಾಗಿ ಈ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಹೇಳಿದರು.
ಜಂಟಿ ಕೃಷಿ ನಿರ್ದೇಶಕ ರಮೇಶ್, ಕೃಷಿ ಉಪ ನಿರ್ದೇಶಕ ಹುಲಿರಾಜು ಹಾಗೂ ಹೆಚ್.ಸಿ.ಚಂದ್ರಕುಮಾರ್, ಸಹಾಯಕ ಕೃಷಿ ನಿರ್ದೇಶಕ ಗಿರಿಜಮ್ಮ ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿ, ಸ್ಪರ್ಧಿಗಳು ಹಾಜರಿದ್ದರು.
Comments are closed.