ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕೈಗಾರಿಕೆ, ಕಾರ್ಮಿಕ, ರೇಷ್ಮೆ, ಕಂದಾಯ, ವಿಕಲ ಚೇತನರ ಕಲ್ಯಾಣ ಇಲಾಖೆ, ಮಹಾ ನಗರಪಾಲಿಕೆ, ಹಾಲು ಒಕ್ಕೂಟ, ವಿವಿಧ ನಿಗಮಗಳು, ಎನ್ ಆರ್ ಎಲ್ ಎಂ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಯೋಜನೆಗಳಡಿ 1.46 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಸಿದ್ಧವಿರುವ ಲೋಕೋಪಯೋಗಿ, ಅಗ್ನಿಶಾಮಕ, ಪೊಲೀಸ್, ಸಣ್ಣ ನೀರಾವರಿ, ಸಮಾಜ ಕಲ್ಯಾಣ, ಕೃಷಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕೊಳಗೇರಿ ಅಭಿವೃದ್ಧಿ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 1500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
Comments are closed.