ತುಮಕೂರು: ಕಾಂಗ್ರೆಸ್ ಶಾಸಕರಿಗೆ ವಿಶೇಷ ಅನುದಾನ ನೀಡಿ ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದೆ ತಾರತಮ್ಯ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ, ಡಿಸೆಂಬರ್ 2ರಂದು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಹೋರಾಟ ನಡೆಸುವುದಾಗಿ ಜಿಲ್ಲೆಯ ಎನ್ ಡಿಎ ಶಾಸಕರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಎಂಟು ತಿಂಗಳು ಕಳೆದರೂ ಒಂದು ರೂಪಾಯಿಯ ಅಭಿವೃದ್ಧಿ ಕೆಲಸಗಳಾಗಿಲ್ಲ, ಶಾಸಕರ ಕ್ಷೇತ್ರಗಳಿಗೆ 25 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು, ಇದೂವರೆಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಜನರ ತೆರಿಗೆ ಹಣವನ್ನು ಎಲ್ಲಾ ಕ್ಷೇತ್ರಗಳಿಗೆ ಸಮಾನವಾಗಿ ಹಂಚಬೇಕು, ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಲಿಲ್ಲ ಎಂದು ಪ್ರಧಾನ ಮಂತ್ರಿ, ಹಣಕಾಸು ಮಂತ್ರಿ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್ ನಾಯಕರು ಯಾವ ನೈತಿಕತೆ ಉಳಿಸಿಕೊಂಡಿದ್ದೀರಿ? ಬಿಜೆಪಿ, ಜೆಡಿಎಸ್ ಕ್ಷೇತ್ರದ ಜನ ತೆರಿಗೆ ಕಟ್ಟುವುದಿಲ್ಲವೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದೆ ತಾರತಮ್ಯ ಮಾಡಿದ ಕಾಂಗ್ರೆಸ್ ಸರ್ಕಾರದ ನಡವಳಿಕೆ ಖಂಡಿಸಿ, ಮುಖ್ಯಮಂತ್ರಿಗಳ ಕಾರ್ಯಕ್ರಮದ ಒಳಗಾಗಿ ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಗುಬ್ಬಿಯ ಜೆಡಿಎಸ್ ಮುಖಂಡ ನಾಗರಾಜು, ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಜಗದೀಶ್, ಪ್ರಭಾಕರ್, ಮಾಧ್ಯಮ ಪ್ರಮುಖ್ ಜೆ.ಜಗದೀಶ್ ಹಾಜರಿದ್ದರು.
Comments are closed.