ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಡಿಸೆಂಬರ್ 2 ರಂದು ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಅಧಿಕಾರಿಗಳೇ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಸರೆನ್ಸ್ ಸಭೆ ನಡೆಸಿ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತು ಪಡೆಯಲು ಆಗಮಿಸುವ ಫಲಾನುಭವಿಗಳ ಮಾಹಿತಿ ಪಡೆದ ಅವರು ಸವಲತ್ತು ಪಡೆಯುವ ಫಲಾನುಭವಿಗಳೊಂದಿಗೆ ಡಿಸೆಂಬರ್ 2ರಂದು ಬೆಳಗ್ಗೆ 9.30ಗಂಟೆಗೆ ಕಾರ್ಯಕ್ರಮ ಸ್ಥಳದಲ್ಲಿ ಹಾಜರಿರಬೇಕು ಎಂದು ನಿಯೋಜಿತ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಅಡಿಗಲ್ಲುಗಳನ್ನು ಒಂದೇ ವಿನ್ಯಾಸದಲ್ಲಿ ಸಿದ್ಧಪಡಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ಸೂಚನೆ ನೀಡಿದರು.
ಶಿಷ್ಟಾಚಾರದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಖುದ್ದಾಗಿ ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಜರಿದ್ದರು.
Comments are closed.