ತುಮಕೂರು: ರಾಜ್ಯದಲ್ಲಿ ಕೃಷಿ ಕ್ಷೇತ್ರ ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿ ವೀಕ್ಷಿಸಿ ಮಾತನಾಡಿ, ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್ ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್ ನಿಂದ 944 ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ, ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶ ಸ್ವಾಧೀನ ಪಡಿಸಿಕೊಳ್ಳಲಾಗಿದೆ, ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅನ್ನು ನಿರ್ಮಿಸಲಾಗಿದೆ, ಇದರಿಂದ 1355 ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸರಬರಾಜು ಮಾಡುವ ಯೋಜನೆ ಹೊಂದಲಾಗಿದೆ, ಮೆ.ರಾಮ್ ತರಂಗ್ ಸೆಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪ್ಲಾಂಟ್ ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ರಾಜ್ಯದಾದ್ಯಂತ ಸರ್ಕಾರವು ಕುಸುಮ್-ಸಿ ಯೋಜನೆಯ ಕಾರ್ಯಾರಂಭ ಮಾಡಿದ್ದು, ಪ್ರಾರಂಭಿಕವಾಗಿ ಶಿರಾ ತಾಲ್ಲೂಕಿನ ಚಂಗಾವರ ಹಾಗೂ ಚಿಕ್ಕಬಾಣಗೆರೆ ಗ್ರಾಮಗಳಲ್ಲಿ ಸೌರ ಘಟಕಗಳನ್ನು ನಿರ್ಮಿಸಲಾಗಿದೆ, ಇದರಿಂದ ಸ್ಥಳೀಯ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ತಡೆ ರಹಿತ ವಿದ್ಯುತ್ ಪೂರೈಕೆ ಮಾಡಲಾಗುವುದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಸೌರ ಘಟಕಗಳ ಕಾರ್ಯಾರಂಭಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದರಲ್ಲದೆ, ಕುಸುಮ್-ಸಿ ಯೋಜನೆಯಿಂದ ಬೆಸ್ಕಾಂ ಕಂಪನಿಗೆ ವಿದ್ಯುತ್ ಖರೀದಿ ದರ ಕಡಿಮೆಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ, ಬೆಸ್ಕಾಂ ಮುಖ್ಯ ಇಂಜಿನಿಯರ್ (ಯೋಜನೆಗಳು) ರಮೇಶ್ ಗುಡಿ ಹಾಗೂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ, ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಡಿ. ಶಿವಕುಮಾರ್, ಬೆಸ್ಕಾಂ ಮಧುಗಿರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಜಗದೀಶ್, ತುಮಕೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಾಂತರಾಜು.ಇ, ನಗರ ಸಭೆ ಅಧ್ಯಕ್ಷ ಜೀಶಾನ್ ಮಹಮೂದ್, ರಾಮ್ ತರಂಗ್ ಖಾಸಗಿ ಕಂಪನಿಯ ಮುಖ್ಯಸ್ಥರಾದ ರವಿಶಂಕರ್, ಚಂದ್ರಶೇಖರ್ ಹಾಜರಿದ್ದರು.
Comments are closed.