ತುಮಕೂರು: ರಾಜ್ಯದಲ್ಲಿ (ಹ್ಯೂಮನ್ ಮೆಟಾನ್ಯೂಮೊ ವೈರಸ್) ಹೆಚ್ ಎಂಪಿವಿ ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ ಎಂಪಿವಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್ ನಿಂದ ಮುಚ್ಚಿಕೊಳ್ಳಬೇಕು, ಕೈಗಳನ್ನು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು, ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು, ಬಳಸಿದ ಟಿಶ್ಯೂ, ಕರವಸ್ತ್ರವನ್ನು ಪುನರ್ ಬಳಕೆ ಮಾಡಬಾರದು, ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಮತ್ತಿತರರು ಹಾಜರಿದ್ದರು.
Comments are closed.