ಪಾರದರ್ಶಕವಾಗಿ ನಡೆಸಲು ಡೀಸಿ ಸೂಚನೆ

ಫೆ.15ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆ

11

Get real time updates directly on you device, subscribe now.


ತುಮಕೂರು: ಜಿಲ್ಲೆಯ 18 ಕೇಂದ್ರಗಳಲ್ಲಿ ಫೆಬ್ರವರಿ 15ರಂದು ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷೆಯು ಫೆಬ್ರವರಿ 15ರಂದು ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿರಬೇಕು, ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್ ಲೆಸ್ ಸೆಟ್, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಕೊಠಡಿಗೆ ಉತ್ತಮ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರಲ್ಲದೆ, ಪರೀಕ್ಷಾ ಕೇಂದ್ರಗಳ ಬಳಿ 2 ಮಹಿಳಾ ಹಾಗೂ ಪುರುಷ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಪ್ರವೇಶಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ದಿನದಂದು ಪ್ರಶ್ನೆಪತ್ರಿಕೆ ಹಾಗೂ ಇತರೆ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಹಾಗೂ ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಹಸ್ತಾಂತರಿಸಲು ತಾಲ್ಲೂಕುವಾರು ತ್ರಿಸದಸ್ಯ ತಂಡ ನೇಮಿಸಿದರಲ್ಲದೆ, ಯಾವುದೇ ಸಮಸ್ಯೆ ಎದುರಾಗದಂತೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಲು ತಂಡದ ಸದಸ್ಯರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಾಲಗುರುಮೂರ್ತಿ, ಜಿಲ್ಲಾ ಖಜಾನೆ ಉಪ ನಿರ್ದೇಶಕ ಉಮಾ, ವಿವಿಧ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!