ತುಮಕೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ 20ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಮೊಬೈಲ್ ಫೋನ್, ರಿಸ್ಟ್ ವಾಚ್, ಬ್ಲೂಟೂತ್ ಸೇರಿದಂತೆ ವಿದ್ಯುನ್ಮಾನ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವುದನ್ನು ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೀಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು, ಪ್ರತಿ ಕೇಂದ್ರದ ಚಟುವಟಿಕೆಗಳನ್ನು ಜಿಲ್ಲಾಡಳಿತದ ಕಚೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ಮೂಲಕ ನಿಗಾವಹಿಸಲಾಗುವುದು ಎಂದು ತಿಳಿಸಿದರು.
ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಯಾವುದೇ ಲೋಪದೋಷಗಳಿಲ್ಲದಂತೆ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲಗುರುಮೂರ್ತಿ, ಶಿಕ್ಷಣ ಇಲಾಖೆಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
Comments are closed.