ಮುಖ್ಯಮಂತ್ರಿ ಯಡಿಯೂರಪ್ಪಗೆ ಸಚಿವ ಮಾಧುಸ್ವಾಮಿ ಮನವಿ

ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತಕ್ಕೆ ಸ್ವಾತಂತ್ರ್ಯ ನೀಡಿ

287

Get real time updates directly on you device, subscribe now.

ತುಮಕೂರು: ಕೋವಿಡ್‌- 19 ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಡೆಸಿದ ವೀಡಿಯೋ ಕಾನ್ಪರೆನ್ಸ್ ಸಭೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಪರೆನ್ಸ್ ಮೂಲಕ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು.
ವೀಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು, ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಬೆಂಗಳೂರಿನಿಂದ ಜಿಲ್ಲೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಳ್ಳಿಗಳಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲು ಚೆಕ್‌ಪೋಸ್ಟ್ ಸ್ಥಾಪಿಸಲು ಅನುಮತಿ ನೀಡಬೇಕೆಂದು ಕೋರಿದರು.
ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿ, ಶ್ರೀದೇವಿ ವೈದ್ಯಕೀಯ ಕಾಲೇಜನ್ನು ತಾತ್ಕಾಲಿಕವಾಗಿ ಸರ್ಕಾರಿ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದರೆ ಹಾಸಿಗೆ ಸಮಸ್ಯೆ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಆಮ್ಲಜನಕ, ರೆಮ್‌ಡಿಸಿವಿರ್‌ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ, ಸರ್ಕಾರ ಜಿಲ್ಲೆಯ ಬೇಡಿಕೆಗೆ ತಕ್ಕಂತೆ ಆಮ್ಲಜನಕ ಮತ್ತು ರೆಮ್‌ಡಿಸಿವಿರ್‌ ಪೂರೈಸಬೇಕು, ಜಿಲ್ಲೆಯಲ್ಲಿ ಆರ್ ಟಿ ಪಿ ಸಿ ಆರ್‌ ಪರೀಕ್ಷೆ ಮಾಡಲು ಒಂದು ಮೊಬೈಲ್‌ ವ್ಯಾನ್‌ ಅವಶ್ಯಕವಿದೆ, ಇದರಿಂದ ಮಧುಗಿರಿ, ಪಾವಗಡ, ಶಿರಾ ತಾಲೂಕಿನ ಕೋವಿಡ್‌ ಪರೀಕ್ಷೆ ಮಾಡಲು ಸುಲಭವಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿಗೆ ಸಮೀಪವಿರುವ ತುಮಕೂರು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು, ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು, ಜಿಲ್ಲಾಡಳಿತಕ್ಕೆ ಈ ನಿಟ್ಟಿನಲ್ಲಿ ಸ್ವಾತಂತ್ರ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಮಾತನಾಡಿ, ಈಗಾಗಲೇ ತುಮಕೂರು ನಗರ ಸೇರಿದಂತೆ ಪ್ರತಿ ತಾಲೂಕಿನಲ್ಲಿಯೂ ಕೋವಿಡ್‌ ಕೇರ್‌ ಕೇಂದ್ರ ಸ್ಥಾಪಿಸಲಾಗಿದ್ದು, ಹೋಂ ಐಸೋಲೇಷನ್ ನಲ್ಲಿ ಇರುವವರನ್ನು ಕೋವಿಡ್‌ ಕೇರ್ಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಹೋಂ ಐಸೊಲೇಶನ್‌ನಲ್ಲಿರುವ ಸೋಂಕಿತರ ದಿನಚರಿ ಆರೋಗ್ಯ ವಿಚಾರಣೆ ನಡೆಸಲು ಹೆಲ್ತ್ ವಾರ್‌ ರೋಮ್‌ಗಳ ಸ್ಥಾಪನೆ ಮಾಡಲಾಗಿದೆ. ಈ ಹೆಲ್ತ್ ವಾರ್‌ ರೂಂಗಳ ಮೂಲಕ ಸೋಂಕಿತರ ಆರೋಗ್ಯ ವಿಚಾರಣೆ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ದಿನಕ್ಕೊಮ್ಮೆ ಕರೆ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಿಡಿಯೋ ಕಾನ್ಪರೆನ್ಸ್ ನಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಉಪ ವಿಭಾಗಾಧಿಕಾರಿ ಅಜಯ್‌, ಡಿಹೆಚ್‌ಒ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್‌ಬಾಬು ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!