ರಾಜ್ಯದಲ್ಲಿ ಹತ್ತು ಲಕ್ಷ ಮನೆ ನಿರ್ಮಿಸುವ ಗುರಿ: ವಸತಿ ಸಚಿವ ವಿ.ಸೋಮಣ್ಣ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ದಿಟ್ಟ ಕ್ರಮ

90

Get real time updates directly on you device, subscribe now.

ತುಮಕೂರು: ಸರ್ಕಾರವು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷ ಮನೆ ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವವರ ಜೊತೆಗೆ ಸರ್ಕಾರ ಸದಾ ಇರುತ್ತದೆ, ಈಗಾಗಲೇ ಕೊರೊನಾ ಪರಿಹಾರ ಸಹ ಘೋಷಿಸಿದ್ದು, ಸೋಂಕು ನಿಯಂತ್ರಣ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಆದ್ಯತೆಗನುಸಾರವಾಗಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಸುಮಾರು ಮೂರು ಲಕ್ಷ ಮನೆಗಳನ್ನು ನಿರ್ಮಿಸಿ ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗದ ವಸತಿರಹಿತ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ, ಕೊರೊನಾ ಕಾರಣದಿಂದ ಮನೆಗಳ ನಿರ್ಮಾಣ ಕಾರ್ಯಕ್ಕೆ ಹಿನ್ನಡೆಯಾಗಿದೆ ಎಂದರು.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಆಡಳಿತ ಕುಸಿದು ಹೋಗಿಲ್ಲ, ಬಿಜೆಪಿ ಸರ್ಕಾರ ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅಲ್ಲಿನ ಆಯುಕ್ತರಾದ ಶಿಲ್ಪನಾಗ್‌ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳು ಕ್ರಮ ತೆಗೆದುಕೊಳ್ಳುತ್ತಾರೆ, ನಮಗೆ ಮುಖ್ಯಮಂತ್ರಿಗಳು ಕೊರೊನಾ ವಿಚಾರದಲ್ಲಿ ಕೆಲಸ ಮಾಡಿ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದ್ದಾರೆ ಹಾಗೂ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕೂಡ ನಮಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ, ರಾಜ್ಯದಲ್ಲಿ ಕೊರೊನ ಕಂಟ್ರೋಲ್‌ ಮಾಡುವುದು ಹಾಗೂ ಸಂಕಷ್ಟ ದಿಂದ ಜನರನ್ನು ಪಾರು ಮಾಡುವುದು ನಮ್ಮ ಉದ್ದೇಶ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಈ ಮೂರು ಪಕ್ಷಗಳ ಸರ್ಕಾರ ಇದೆ ಎಂದು ಸಿ.ಪಿ.ಯೋಗೀಶ್ವರ್‌ ಮಾಡಿರುವ ಆರೋಪದ ಬಗ್ಗೆ ಸಿಟ್ಟಾದ ಸಚಿವ ವಿ.ಸೋಮಣ್ಣ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಈಗಾಗಲೇ ನಾನು ಅದರ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದೇನೆ ಎಂದರು.
ಸರ್ಕಾರವು ಕೆಲವು ವರ್ಗಗಳಿಗೆ ಪರಿಹಾರ ಪ್ಯಾಕೇಜ್‌ ಘೋಷಿಸಿದ್ದು ಪತ್ರಕರ್ತರಿಗೂ ಇದೇ ರೀತಿ ಪರಿಹಾರ ಪ್ಯಾಕೇಜ್‌ ಘೋಷಿಸಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಸಚಿವರು ರಾಜ್ಯದಲ್ಲಿ ಅನೇಕ ಪತ್ರಕರ್ತರು ಸಂಕಷ್ಟದ ಸ್ಥಿತಿಯಲ್ಲಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಬಸವರಾಜ್‌, ಪಾಲಿಕೆ ಮಹಾ ಪೌರರಾದ ಕೃಷ್ಣಪ್ಪ, ನಗರ ಶಾಸಕ ಜ್ಯೋತಿಗಣೇಶ್‌, ಮಾಜಿ ಸಚಿವ ಸೊಗಡು ಶಿವಣ್ಣ, ಕುಂದರನಹಳ್ಳಿ ರಮೇಶ್‌ ಇನ್ನಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!