ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ, ಪಂಗಡದವರಿಗೆ ಆದ್ಯತೆ, ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆಯ ಸಮಗ್ರ ಅನುಷ್ಠಾನಕ್ಕೆ ಆದ್ಯತೆ ಕೊಡಬೇಕು ಎಂದು ಸಂಸದರಾದ ಜಿ.ಎಸ್.ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಜಂಟಿಯಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ನರೇಗಾ ಯೋಜನೆ ಅನುಷ್ಠಾನಕ್ಕೆ ತರಲಾಗಿದ್ದು, ಈ ಯೋಜನೆಯನ್ನು ಲೋಪದೋಷವಾಗದಂತೆ ಹಾಗೂ ಹಣ ದುರ್ಬಳಕೆಯಾಗದಂತೆ ಅನುಷ್ಠಾನಗೊಳಿಸಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಬಹುದಾದ ಎಲ್ಲವನ್ನೂ ಸಮಗ್ರವಾಗಿ ಅನುಷ್ಠಾನಗೊಳಿಸಿ ಈ ಯೋಜನೆ ಯಶಸ್ವಿಯಾಗುವಂತೆ ಕ್ರಮ ವಹಿಸುವಂತೆ ನಿರ್ದೇಶಿಸಿದರು.
ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ಎಲ್ಲಾ ವೇತನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕಾಲಮಿತಿಯೊಳಗೆ ಮನೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಕಟ್ಟಡ, ಶಾಲಾ ಶೌಚಾಲಯಗಳನ್ನು ನಿರ್ಮಿಸಬೇಕು. ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ಥಿಗೊಳಿಸಬೇಕು. ಜೊತೆಗೆ ಕೆರೆ ಕಟ್ಟೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು. ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರಗೊಳಿಸುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಸಂಸದರ ನಿರ್ದೇಶನದಂತೆ ನರೇಗಾ ಯೋಜನೆಯಡಿ ಅನುಷ್ಠಾನಕ್ಕಾಗಿ ಕೈಗೊಂಡಿರುವ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಸಭೆ ವೇಳೆಗೆ ಈಗ ಸೂಚಿಸಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಪ್ರಸ್ತುತ ಮಳೆಗಾಲ ಪ್ರಾರಂಭಗೊಂಡಿರುವುದರಿಂದ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಶಾಲೆಗಳಲ್ಲಿ ಗಿಡಗಳನ್ನು ನೆಡಬೇಕು ಎಂದು ನಿರ್ದೇಶಿಸಿದರು.
ಕೃಷಿ, ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ ನೀಡಿ: ಜಿ.ಎಸ್.ಬಸವರಾಜು
ಸಮಗ್ರವಾಗಿ ನರೇಗಾ ಯೋಜನೆ ಅನುಷ್ಠಾನ ಮಾಡಿ
Get real time updates directly on you device, subscribe now.
Prev Post
Next Post
Comments are closed.