ತುಮಕೂರು: ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಆದ್ಯತೆಗನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಸಮಗ್ರವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯ ಜಿಲ್ಲಾ ಮಟ್ಟದ ಸಂಘಟನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಮೊದಲಾದ್ಯತೆ ನೀಡಬೇಕು ಎಂದು ನಿರ್ದೇಶಿಸಿದರು.
ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನುಗುಣವಾಗಿ ಮೊದಲಾದ್ಯತೆಯಾಗಿ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ದುರಸ್ತಿ ಕಾಮಗಾರಿ, ಶಾಲೆ ಮತ್ತು ಅಂಗನವಾಡಿಗಳ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಅನುಷ್ಠಾನಗೊಳಿಸಬೇಕು. ಈಗಾಗಲೇ ಮೂಲಭೂತ ಸೌಕರ್ಯಗಳಿದ್ದರೆ ರಸ್ತೆ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.
ಪುನರ್ ಪರಿಶೀಲನೆಗೆ ಸೂಚನೆ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 2019- 20ನೇ ಸಾಲಿನಲ್ಲಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಮೊದಲಾದ್ಯತೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸಲು ಕ್ರಿಯಾಯೋಜನೆ ಸಿದ್ಧಪಡಿಸಿಲ್ಲದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ, ಈ ಗ್ರಾಮಗಳಲ್ಲಿ ಸಕಲ ಮೂಲಭೂತ ಸೌಕರ್ಯ ಸಮಪರ್ಕವಾಗಿರುವ ಬಗ್ಗೆ ಪುನರ್ ಪರಿಶೀಲಿಸಬೇಕು. ಪುನರ್ ಪರಿಶೀಲನೆಗೆ ಪಿಡಿಒ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಅವರಿಂದ ಪುನರ್ ಪರಿಶೀಲಿಸಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆ ಇರುವುದನ್ನು ದೃಢೀಕರಿಸಬೇಕು. ಮೂಲಭೂತ ಸೌಕರ್ಯ ಇಲ್ಲದಿದ್ದರೆ ಹೊಸದಾಗಿ ಕ್ರಿಯಾಯೋಜನೆ ತಯಾರಿಸಿ ಈ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಇನ್ನು ಮೂರು ದಿನಗಳಲ್ಲಿ ಪುನರ್ ಪರಿಶೀಲನೆ ಮಾಡಿ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಾರ್ಗಸೂಚಿ ಪಾಲನೆಯಾಗಿಲ್ಲ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, 2019- 20ನೇ ಸಾಲಿನ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳು ಪಾಲನೆಯಾಗಿಲ್ಲ. ರಸ್ತೆ, ಕಾಂಕ್ರಿಟ್ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿಲ್ಲ. ಆದ್ದರಿಂದ ಈ ಗ್ರಾಮಗಳಲ್ಲಿ ಪುನರ್ ಪರಿಶೀಲನೆ ನಡೆಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಅಂಗನವಾಡಿ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Comments are closed.