ದೌರ್ಜನ್ಯ ಪ್ರಕರಣ ನಡೆಯದಂತೆ ಕ್ರಮ ವಹಿಸಿ: ವೈ.ಎಸ್‌.ಪಾಟೀಲ

ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ್ರೆ ಸುಮ್ಮನಿರಲ್ಲ

549

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣ ನಡೆಯದಂತೆ ಕ್ರಮ ಕೈಗೊಂಡು ಮಕ್ಕಳ ರಕ್ಷಣೆಗೆ ಆದ್ಯತೆ ಕೊಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚು ಬಾಲ್ಯ ವಿವಾಹ ನಡೆಯುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶಗಳಲ್ಲಿ ಹೆಚ್ಚು ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ನಿರ್ದೇಶಿಸಿದರು.
ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಅಪಾಯದಂತಿರುವ ವಿದ್ಯುತ್‌ ಕಂಬ ಹಾಗೂ ಶಾಲಾ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್‌ ತಂತಿ ತೆರವುಗೊಳಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿರುವವರ ಸಂಖ್ಯೆ ಹೆಚ್ಚು ಕಂಡು ಬರುತ್ತಿದ್ದು, ಭಿಕ್ಷಾಟನೆಯಲ್ಲಿ ತೊಡಗಿರುವವರ ಮೇಲೆ ದಾಳಿ ನಡೆಸಿ ಅವರನ್ನು ಹತ್ತಿರದ ಸಾಂತ್ವನ ಕೇಂದ್ರಗಳಿಗೆ ಸೇರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಮಸ್ಯೆ ಹಾಗೂ ಸಹಾಯಕ್ಕಾಗಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಮಕ್ಕಳ ಸಂಪೂರ್ಣ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಬೇಕು. ಸಂಬಂಧಿಸಿದ ಇಲಾಖಾಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ದೂರು ಆಧರಿಸಿ ಮಕ್ಕಳನ್ನು ಭೇಟಿ ಮಾಡಿ ಪರಿಶೀಲನೆ ನಡೆಸಿ ರಕ್ಷಣೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್‌ ಹಾಗೂ ಕೋವಿಡೇತರ ಕಾರಣದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ರಕ್ಷಣೆ ಮತ್ತು ಪಾಲನೆಗೆ ಹೆಚ್ಚು ಒತ್ತು ಕೊಡಬೇಕು, ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಗ್ರವಾಗಿ ತಲುಪಿಸಬೇಕು. ಅವರ ಶಿಕ್ಷಣದ ಭವಿಷ್ಯಕ್ಕೂ ಆದ್ಯತೆ ಕೊಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್‌ ಮಾತನಾಡಿ, ಜಿಲ್ಲೆಯಲ್ಲೆ ಬಾಲ್ಯ ವಿವಾಹ, ಫೋಕ್ಸೋ, ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳು ಹಾಗೂ ಮಕ್ಕಳ ರಕ್ಷಣೆಗೆ ಕೈಗೊಂಡಿರುವ ಬಗ್ಗೆ ಸಭೆಗೆ ಮಾಹಿತಿ ಒದಗಿಸಿದರು.
ಸಭೆ ಮುಕ್ತಾಯದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಹೊರ ತರಲಾಗಿರುವ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ವಿವರದ ಕರಪತ್ರ ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ- 2021ರ ಕುರಿತ ಕರಪತ್ರವನ್ನು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಿಡುಗಡೆ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್‌.ನಟರಾಜ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಸೇರಿದಂತೆ ಇತರೆ ಅಧಿಕಾರಿಗಳು ಸಂಘ- ಸಂಸ್ಥೆಗಳ ಮುಖ್ಯಸ್ಥರು ಇದ್ದರು.

Get real time updates directly on you device, subscribe now.

Comments are closed.

error: Content is protected !!