ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡ್ಬೇಡಿ: ಡೀಸಿ

465

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು, ಡೈರೆಕ್ಟರ್‌ ಜನರಲ್‌ ಆಫ್‌ ಮೈನ್‌ ಸೇಫ್ಟಿ ಅನ್ವಯ ಯಾವುದೇ ಅವಘಡ ಸಂಭವಿಸದಂತೆ ಗಣಿಗಾರಿಕೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ್‌ ಮತ್ತು ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಯಮಗಳ ಪ್ರಕಾರವೇ ಗಣಿಗಾರಿಕೆಗೆ ಅವಕಾಶ ನೀಡಬೇಕು. ಗಣಿಗಾರಿಕೆ ನಡೆಸುವ ಸಂಬಂಧದ ನೀತಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಯಾವುದೇ ಸಮಸ್ಯೆ, ಅವಘಡ ಸಂಭವಿಸದಂತೆ ಗಣಿಗಾರಿಕೆ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಅಕ್ರಮ ಗಣಿಗಾರಿಕೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಗಣಿಗಾರಿಕೆ ನಡೆಸಲು ಅನುಮತಿ ಪಡೆದಿರುವವರು ಸಂಜೆ 6 ರಿಂದ 7 ಗಂಟೆಯ ನಡುವಿನ ಒಂದು ಗಂಟೆ ಅವಧಿಯಲ್ಲಿ ಮಾತ್ರ ಬ್ಲಾಸ್ಟ್ ಮಾಡುವ ಪ್ರಕ್ರಿಯೆ ಮಾಡಬೇಕು, ಉಳಿದ ಯಾವುದೇ ಸಮಯದಲ್ಲಿಯೂ ಬ್ಲಾಸ್ಟ್ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಕ್ರಮ ಮರಳು ಮಾಫಿಯಾ ನಡೆಯುತ್ತಿರುವ ಕುರಿತು ದೂರು, ವರದಿಗಳು ಕೇಳಿ ಬರುತ್ತಿದ್ದು, ಅಕ್ರಮ ಮರಳುಗಾರಿಕೆ ನಡೆಯದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈ ವೇಳೆ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಮಹೇಶ್‌, ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡುತ್ತಿಲ್ಲ. ಅಕ್ರಮ ಮರಳುಗಾರಿಕೆ ನಡೆಯುವುದು ಕಂಡುಬಂದ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಅಕ್ರಮ ಮರಳು ಮಾಫಿಯಾ ಕಂಡು ಬಂದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಹಸೀಲ್ದಾರ್‌, ಪಿಡಿಒ ಅಥವಾ ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡಬಹುದು ಎಂದರು.
ಮರಳು ಮಾಫಿಯಾ ಮತ್ತು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಸಂಬಂಧ ವಶಪಡಿಸಿಕೊಳ್ಳಲಾಗಿರುವ ಉಪ ಖನಿಜವನ್ನು ಹರಾಜು ಮೂಲಕ ವಿಲೇವಾರಿ ಮಾಡಬೇಕು ಎಂದು ನಿರ್ದೇಶಿಸಿದರು.
ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ನಿಯಮ ಮೀರಿ ಗಣಿಗಾರಿಕೆ ನಡೆಸಲು ಪರವಾನಗಿ ನೀಡಬಾರದು, ವನ್ಯಜೀವಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನನ್ನು ಮೀರಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಬಾರದು ಎಂದು ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಾಪುರವಾಡ್‌ ಮಾತನಾಡಿ, ಭವಿಷ್ಯದಲ್ಲಿ ಯಾವುದೇ ತೊಂದರೆ ಎದುರಾಗದಂತೆ, ಅವಘಡ ಸಂಭವಿಸದ ರೀತಿಯಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಬೇಕು, ಗಣಿಗಾರಿಕೆ ಸಂಬಂಧ ಜಿಲ್ಲೆಗೆ ಯಾವುದೇ ಸಲಕರಣೆ ಬಂದರೂ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್‌, ಸಾಮಾಜಿಕ ಅರಣ್ಯ ಉಪ ವಿಭಾಗದ ಸಂರಕ್ಷಣಾಧಿಕಾರಿ ರಮೇಶ್‌, ಪಾಲಿಕೆ ಆಯುಕ್ತೆ ರೇಣುಕಾ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!