ಸ್ವಾತಂತ್ರ್ಯದ ಅಮೃತ ಮಹೋತ್ಸವ ಯಶಸ್ವಿಗೊಳಿಸಿ

ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿ: ಸಚಿವ ಮಾಧುಸ್ವಾಮಿ ಸೂಚನೆ

442

Get real time updates directly on you device, subscribe now.

ತುಮಕೂರು: ಭಾರತ ದೇಶದ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳ ಆಯೋಜನೆ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶಕ್ಕೆ ಸ್ವಾಂತಂತ್ರ್ಯ ದೊರೆತು 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಎಂಬ ಕಾರ್ಯಕ್ರಮದ ಅಂಗವಾಗಿ 75 ವಾರಗಳ ಕಾಲ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ನಿರ್ದೇಶಿಸಿದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತು ಮುಂದಿನ 2022ರ ಆಗಸ್ಟ್ 15ಕ್ಕೆ 75 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ಈ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಲಾಖೆಗಳು ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಈ ಅಮೃತ ಮಹೋತ್ಸವದ ಬ್ಯಾನರ್‌ ಅಡಿ ನಡೆಸುವ ಮೂಲಕ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ತುಂಬುತ್ತಿರುವ ವಿಚಾರವನ್ನು ಜನ ಸಾಮಾನ್ಯರಿಗೆ ಸಾರುವುದು ಪ್ರಧಾನ ಮಂತ್ರಿಯವರ ಮೂಲ ಆಶಯವಾಗಿದೆ. ಅದರಂತೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭಿಸಿರುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಪ್ರಚಾರ ಮಾಡಬೇಕು ಎಂದು ನಿರ್ದೇಶಿಸಿದರು.
ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸೌಲಭ್ಯಗಳ ಕುರಿತು ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಹಾಗೂ ಆಚರಣೆಗಳ ಬ್ಯಾನರ್ ನಲ್ಲಿ ಅಮೃತ ಮಹೋತ್ಸವ ಎಂಬುದನ್ನು ಪ್ರಚುರಪಡಿಸಬೇಕು. ಆ ಮೂಲಕ ಅಮೃತ ಮಹೋತ್ಸವ ಕಾರ್ಯಕ್ರಮದ ಆಶಯದೊಂದಿಗೆ ಇಲಾಖೆಯಡಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮದ ಉದ್ದೇಶಗಳನ್ನು ಪ್ರಚಾರ ಮಾಡಬೇಕು ಎಂದು ಸೂಚನೆ ನೀಡಿದರು.
ಕೃಷಿ ಇಲಾಖೆಯಿಂದ ಎಣ್ಣೆಕಾಳು ಬೆಳೆಗಳ ಬಗ್ಗೆ ಹಾಗೂ ತೋಟಗಾರಿಕೆ ಇಲಾಖೆಯಿಂದ ತೆಂಗು ಉತ್ಪನ್ನಗಳ ಬಗ್ಗೆ ಅಮೃತಮಹೋತ್ಸವ ಕಾರ್ಯಕ್ರಮದಡಿಯಲ್ಲಿಯೇ ಆಯೋಜಿಸಬೇಕು. ಅಮೃತ ಮಹೋತ್ಸವ ಕಾರ್ಯಕ್ರದಮದಡಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಪ್ರತಿ ತಿಂಗಳು ಆರೋಗ್ಯ ಶಿಬಿರ ನಡೆಸುವಂತೆ ಆರೋಗ್ಯ ಇಲಾಖೆಗೆ, ಶಾಲೆಗಳಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಗೆ, ಮೀನು ಉದ್ಯಮದ ಬಗ್ಗೆ ಕಾರ್ಯಾಗಾರ ನಡೆಸುವಂತೆ ಮೀನುಗಾರಿಕೆ ಇಲಾಖೆಗೆ ಹಾಗೂ ಆಹಾರ ಧಾನ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವಂತೆ ಆಹಾರ ಇಲಾಖೆಗೆ ಸೂಚಿಸಿದರು.
ಎಲ್ಲಿಯೂ ಬೋಗಸ್‌ ಬಿಲ್ ಗಳಾಗದೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು, ಯಾವುದೇ ಕಾರಣಕ್ಕೂ ಹಣ ವ್ಯಯವಾಗಬಾರದು. ಸಮುದಾಯದ ಕಾಮಗಾರಿಗಳಿಗೆ ಆದ್ಯತೆ ಕೊಡಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿಗೆ ಅವರಿಗೆ ನಿರ್ದೇಶಿಸಿದರು.
ಎಣ್ಣೆಕಾಳು ಬೆಳೆಗಳನ್ನು ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಎಣ್ಣೆ ಕಾಳುಗಳ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಿ ಪ್ರೋತ್ಸಾಹಿಸಬೇಕು. ಈ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಅವರಿಗೆ ಸೂಚಿಸಿದರು.
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಜಿಲ್ಲೆಗೆ ಒಂದು ಉತ್ಪನ್ನವಾಗಿ ಆಯ್ಕೆಯಾಗಿರುವ ತೆಂಗು ಬೆಳೆಯ ಉತ್ಪನ್ನಗಳ ಕುರಿತು ಕಾರ್ಯಾಗಾರ ಆಯೋಜಿಸುವಂತೆ ಹಾಗೂ ತೆಂಗುಪಾರ್ಕ್‌ ನಿರ್ಮಾಣಕ್ಕೆ ತುಮಕೂರು ಶಿವಮೊಗ್ಗ ಹೆದ್ದಾರಿಯಲ್ಲಿ ಜಾಗ ಗುರುತಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ರಘು ಅವರಿಗೆ ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌ ಶಹಾಪುರವಾಡ್‌, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!