ವಿಕಲಚೇತನ ಮಕ್ಕಳ ಆರೋಗ್ಯಕ್ಕೆ ಆದ್ಯತೆ ಕೊಡಿ: ಸಿಇಓ

155

Get real time updates directly on you device, subscribe now.

ತುಮಕೂರು: ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳ ಹಾಗೂ ಅದರಲ್ಲೂ ವಿಕಲಚೇತನ ಮಕ್ಕಳ ಆರೋಗ್ಯದತ್ತ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.
ನಗರದ ಜಿಲ್ಲಾ ಬಾಲಭವನದಲ್ಲಿ 75ನೇ ಸ್ವಾತಂತ್ರ್ಯ ಅಮೃತೋತ್ಸವದ ಸ್ಮರಣಾರ್ಥಕವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಗ್ರಾಮೀಣ ಮಟ್ಟದ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗಾಗಿ ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ಹಕ್ಕುಗಳ ರಕ್ಷಣೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಕಾರ್ಯಕ್ರಮ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಹಿತದೃಷ್ಟಿಯಿಂದ ವಿಕಲಚೇತನ ಮಕ್ಕಳ ಪೋಷಕರು ಸೇರಿದಂತೆ ಇತರೆ ವಿಕಲಚೇತನರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಅವರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಹಾಗೂ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್‌ ಮಾತನಾಡಿ, ವಿಕಲಚೇತನರಿಗಾಗಿ ಇರುವ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು ಹಾಗೂ ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದೆ ಎಲ್ಲಾ ವಿಕಲಚೇತನ ಮಕ್ಕಳಿಗೆ ರಕ್ಷಣೆ, ಶಿಕ್ಷಣ ಸಿಗುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಮಕ್ಕಳ ಪೋಷಕರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್‌ ಮಾತನಾಡಿ, ವಿಕಲಚೇತನರಿಗಾಗಿ ಮೀಸಲಿರುವ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ತಮ್ಮ ಕಾರ್ಯವ್ಯಾಪ್ತಿಯಲ್ಲಿನ ವಿಕಲಚೇತನರ ಬೇಡಿಕೆ ಮತ್ತು ಅವಶ್ಯಕತೆಗಳ ಪಟ್ಟಿ ಮಾಡಿ ಅವರಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್‌, ಪೊಕ್ಸೊ ಕಾಯ್ದೆ ಮತ್ತು ದತ್ತು ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಮೇಶ್‌ ಇಲಾಖಾ ಕಾರ್ಯಕ್ರಮಗಳ ವಿವರ, ಗುರುತಿನ ಚೀಟಿ ವಿತರಣೆ ಹಾಗೂ ಅರ್ಹರನ್ನು ಅಂಗವಿಕಲರ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಬಗ್ಗೆ ಮಾಹಿತಿ ನೀಡಿದರು.
ರಕ್ಷಣಾಧಿಕಾರಿ ಗೌತಮ ಮೂಢನಂಬಿಕೆಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ರಕ್ಷಣಾಧಿಕಾರಿ ಶಿವಣ್ಣ ಕೆ.ಎಸ್‌. ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!