ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮೀಕ್ಷೆ ನಡೆಸಿ: ಡೀಸಿ

493

Get real time updates directly on you device, subscribe now.

ತುಮಕೂರು: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ದಿಸೆಯಲ್ಲಿ ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕ ಕಾಯ್ದೆ 1986 ಕಲಂ 17ರಡಿ ನಿರೀಕ್ಷಕರಾಗಿ ನೇಮಕವಾಗಿರುವ ಅಧಿಕಾರಿಗಳು ಜಿಲ್ಲಾದ್ಯಂತ ಬಾಲ ಕಾರ್ಮಿಕ ಸಮೀಕ್ಷೆ ಕೈಗೊಳ್ಳಬೇಕು, ಸಮೀಕ್ಷೆ ಕೈಗೊಳ್ಳುವ ಸಂದರ್ಭದಲ್ಲಿ ನೇಮಿತ ನಿರೀಕ್ಷಕರೊಂದಿಗೆ ಸಂಬಂಧಿಸಿದ ಎಲ್ಲಾ ತಾಲೂಕಿನ ಇಲಾಖಾಧಿಕಾರಿಗಳು, ಸಿಬ್ಬಂದಿ, ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ, ಪಟ್ಟಣ ಪಂಚಾಯ್ತಿಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್‌ಕಲೆಕ್ಟರ್‌ಗಳಿಗೆ ಸಮೀಕ್ಷೆ ಕೈಗೊಳ್ಳುವ ಬಗ್ಗೆ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಸೂಚನೆ ನೀಡುವುದರೊಂದಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.
ಮಕ್ಕಳ ಕುರಿತು ಸಮೀಕ್ಷೆ ಕೈಗೊಂಡ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಮಕ್ಕಳು ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟಿಲ್ಲ ಎಂಬುದನ್ನು ದೃಢೀಕರಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು, ಮಕ್ಕಳು ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟಿದ್ದರೆ ಆ ಮಾಹಿತಿಯನ್ನು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು, ಮಾಹಿತಿ ಬಂದ ತಕ್ಷಣವೇ ಅಧಿಕಾರಿಗಳು ಆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಇಟ್ಟುಕೊಂಡಿದ್ದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರಕ್ಷಣೆ ಮಾಡಿದ ಮಕ್ಕಳನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಆಶ್ರಯ ಕಲ್ಪಿಸಿ ಶಿಕ್ಷಣ ನೀಡುವ ವ್ಯವಸ್ಥೆಗೆ ಸೂಕ್ತ ಕ್ರಮವಹಿಸುವಂತೆ ನಿರ್ದೇಶಿಸಿದರು.
ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ಗ್ರಾಮಗಳಿಂದ ಚಿಕ್ಕ ಮಕ್ಕಳನ್ನು ಕರೆತಂದು ಮನೆಗೆಲಸಗಳಲ್ಲಿ ದುಡಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿದ್ದು, ಅಂತಹ ಬೆಳವಣಿಗೆಗಳಿಗೆ ಮೊದಲು ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್‌ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!