ಅತ್ಯಾಚಾರ, ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

116

Get real time updates directly on you device, subscribe now.

ತುಮಕೂರು: ಚಿಕ್ಕನಹಳ್ಳಿಯ ಛೋಟಸಾಬರ ಪಾಳ್ಯದಲ್ಲಿ ಹಿಂದುಳಿದ ವರ್ಗಗಳ ಮಹಿಳೆಯ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರಾದ ಧನಿಯಾಕುಮಾರ್‌, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೂರೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸ್‌ ಇಲಾಖೆ, ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ವಿಳಂಬವಾಗುತ್ತಿದ್ದು, ಪೊಲೀಸ್‌ ಇಲಾಖೆ ಶೀಘ್ರ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿಯೇ ಉತ್ತಮ ಪೊಲೀಸ್ ಇಲಾಖೆ ಎಂದರೆ ಅದು ರಾಜ್ಯ ಪೊಲೀಸ್‌ ಇಲಾಖೆ, ಎಂಟು ದಿನಗಳು ಕಳೆದರೂ ಜಿಲ್ಲಾ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿಲ್ಲ, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ಇಲ್ಲಿ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ಥರಾಗಿರುವ ಕುಟುಂಬದ ಮಕ್ಕಳಿಗೆ ಪರಿಹಾರ ನೀಡಬೇಕು, ಉಚಿತ ವಿದ್ಯಾಭ್ಯಾಸ ನೀಡಬೇಕು ಎಂದು ಒತ್ತಾಯಿಸಿದರು.
ವಕೀಲರಾದ ನಾರಾಯಣಸ್ವಾಮಿ ಮಾತನಾಡಿ, ಚಿಕ್ಕನಹಳ್ಳಿ ಮಹಿಳೆ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಘೋರ ಪ್ರಕರಣವಾಗಿದ್ದು, ಆರೋಪಿಗಳ ಬಂಧನಕ್ಕೆ ಆಗಿರುವ ವಿಳಂಬಕ್ಕೆ ಕಾರಣವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ ಅವರು ಹಿಂದುಳಿದ ವರ್ಗಗಳ ಮಹಿಳೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ತುಮಕೂರು ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕರಾದ ಧನಿಯಾ ಕುಮಾರ್‌, ಕೆಂಪರಾಜು, ಪ್ರೆಸ್‌ ರಾಜಣ್ಣ, ಸುರೇಶ್‌, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಟಿ.ಇ. ರಘುರಾಮ್‌, ಗಂಗಹನುಮಯ್ಯ, ಮಯೂರ ಕಲಾ ಸಂಘದ ಅಧ್ಯಕ್ಷರಾದ ಪ್ರಸನ್ನ ಚಕ್ರವರ್ತಿ ಸಂಘದ ಅಧ್ಯಕ್ಷರಾದ ಪ್ರಕಾಶ್‌ ಹಿಂದುಳಿದ ವರ್ಗಗಳ ಮುಖಂಡರಾದ ಗುರುಮೂರ್ತಿ ಶಿರಾಗೇಟ್‌ ಶಾಂತರಾಜು, ಮಂಜುನಾಥ್‌, ನಾಗೇಶ್‌, ವಕೀಲ ಮಹದೇವ್‌ ಹಾಗೂ ಎಲ್ಲಾ ಹಿಂದುಳಿದ ನಾಯಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!