ಸೆ.25 ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ

251

Get real time updates directly on you device, subscribe now.

ತುಮಕೂರು: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಮೊದಲಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್‌ 25ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲಾಸ್ಪತ್ರೆ ಆವರಣದಲ್ಲಿ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಹಾಗೂ ಮಕ್ಕಳ ಪೌಷ್ಠಿಕ ಪುನಶ್ಚೇತನ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ವಿವಿಧ ಇಲಾಖೆಗಳ ನಗರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳೂ ವ್ಯವಸ್ಥಿತವಾಗಿ ಜರುಗಲು ವೇದಿಕೆಯನ್ನು ಸಿದ್ಧಗೊಳಿಸಿ ಸಂಬಂಧಿಸಿದ ಇಲಾಖಾಧಿಕಾರಿಗಳು ಜವಾಬ್ದಾರಿ ಹೊತ್ತು ಕಾರ್ಯಕ್ರಮಗಳು ಯಶಸ್ವಿಯಾಗಲು ಕಾರ್ಯ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವ ಕುರಿತು ಚರ್ಚಿಸಿದ ಜಿಲ್ಲಾಧಿಕಾರಿಗಳು, ಮುನ್ನಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಆ್ಯಂಬುಲೆನ್‌್ಸ ಹಾಗೂ ಅಗ್ನಿಶಾಮಕದಳ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಜಿಲ್ಲೆಯ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಪ್ಪದೆ ಭಾಗವಹಿಸಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಗೈರು ಹಾಜರಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್ ಕುಮಾರ್‌ ಶಹಾಪುರವಾಡ್‌ ಮಾತನಾಡಿ, ಕಾರ್ಯಕ್ರಮದಲ್ಲಿ ಡ್ರೋನ್‌ ಕ್ಯಾಮೆರಾ ಬಳಕೆಗೆ ಅವಕಾಶವಿರುವುದಿಲ್ಲ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!