ತುಮಕೂರು: ಜಿಲ್ಲೆಯಲ್ಲಿ ನಷ್ಟ ಉಂಟಾಗಿರುವ ಶೇಂಗಾ ಬೆಳೆಗಾರರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ನರೇಗಾ ಯೋಜನೆಯನ್ನು ಸಮರ್ಪಕ ಸದ್ಬಳಕೆ ಮಾಡಿಕೊಳ್ಳಬೇಕು, ತಾಯಿ- ಶಿಶು ಮರಣ ತಗ್ಗಿಸಲು ಆರೋಗ್ಯ ಸೇವೆ ಉತ್ತಮಗೊಳಿಸಬೇಕು. ಕಳೆದ ಮೂರ್ನಾಲ್ಕು ವರ್ಷಗಳಿಂದ ಬಾಕಿ ಇರುವ ಶಾಲಾ ಕೊಠಡಿಗಳನ್ನು ಶೀಘ್ರ ನಿರ್ಮಿಸಬೇಕು. ರೋಗ ಹರಡದಂತೆ ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಕಾನೂನು, ಸಂಸದೀಯ ವ್ಯವಹಾರಗಳು, ಶಾಸಕ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ರೋಗ ಹಾಗೂ ಮಳೆ ಕೊರತೆ ಪರಿಣಾಮ ಶೇಂಗಾ ಬೆಳೆ ನಷ್ಟದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ಶಿರಾ ತಾಲೂಕಿನಲ್ಲಿ ಬಿತ್ತನೆಯಾಗಿರುವ 37 ಸಾವಿರ ಹೆಕ್ಟೇರ್ ಶೇಂಗಾ ಬೆಳೆಯಲ್ಲಿ ಶೇ.80 ರಷ್ಟು ಹಾಳಾಗಿದೆ. ಈ ಬಗ್ಗೆ ವರದಿ ಪಡೆದು ರೈತರಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಅವರಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ, ಇದೇ ಪ್ರಮಾಣದಲ್ಲಿ ಮಳೆಯಾದರೆ ರಾಗಿ ಬೆಳೆಯೂ ಹಾಳಾಗಲಿದೆ, ಹಾಗಾಗಿ ಬೆಳೆ ಹಾಳಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ಹಾಳಾದ ಬೆಳೆಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡುವ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಬೇಕು. ಅರ್ಹ ಎಲ್ಲಾ ರೈತರಿಗೆ ಯೋಜನೆಯ ಸೌಲಭ್ಯ ತಲುಪಿಸಬೇಕು. ವೈಜ್ಞಾನಿಕವಾಗಿ ಸರ್ವೆ ಮಾಡಿ ಸೌಲಭ್ಯವನ್ನು ನೂರರಷ್ಟು ರೈತರಿಗೆ ತಲುಪಿಸಲು ಕ್ರಮ ವಹಿಸಬೇಕು. ಮುಂದಿನ ತಿಂಗಳೊಳಗೆ ನಿಗಧಿತ ಗುರಿಯಂತೆ ರೈತರಿಗೆ ತಲುಪಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಜಾನುವಾರುಗಳಿಗೆ ರೋಗ ತಗುಲುವುದಕ್ಕೂ ಮುನ್ನವೇ ಮುನ್ನೆಚ್ಚರಿಕೆ ಕ್ರಮವಾಗಿ ಸಮರ್ಪಕವಾಗಿ ಲಸಿಕೆ ಹಾಕಬೇಕು ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಶಾಲಾ ಕೊಠಡಿಗಳ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾಗಿರುವ ಅನುದಾನ ಸಮರ್ಪಕವಾಗಿ ಸದ್ಬಳಕೆಯಾಗಿಲ್ಲ. ಶಾಲಾ ಕಟ್ಟಡಗಳ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗಿದೆ, ಜಿಲ್ಲೆಯಲ್ಲಿ 2019- 20 ನೇ ಸಾಲಿನ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ, ಹೀಗಾದರೆ ಅಭಿವೃದ್ಧಿ ಹೇಗೆ ಸಾಧ್ಯವಾಗಲಿದೆ ಎಂದ ಸಚಿವರು ಇನ್ನೆರಡು ತಿಂಗಳಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಿ ಶೀಘ್ರ ಶಾಲಾ ಕೊಠಡಿಗಳ ಕಟ್ಟಡಗಳ ನಿರ್ಮಾಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಕುಂಠಿತವಾಗಿರುವುದಕ್ಕೆ ಸಚಿವರು ಕಾರಣ ಕೇಳಿದಾಗ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕಾಮಗಾರಿ ಬದಲಾವಣೆ ಆಗಿರುವ ಕಾರಣ ತಡವಾಗಿದೆ ಎಂದು ಸಚಿವರಿಗೆ ಮಾಹಿತಿ ಒದಗಿಸಿದರು.
ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, 2019- 20ನೇ ಸಾಲಿನ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಎಷ್ಟು ಸಲ ಕಾಮಗಾರಿ ಬದಲಾವಣೆ ಮಾಡೋದು. ಮೂರ್ನಾಲ್ಕು ವರ್ಷಗಳಾದರೂ ಕಟ್ಟಡಗಳ ಕಾಮಗಾರಿ ಮುಗಿಯಲ್ಲ ಎಂದರೆ ಹೇಗೆ ಎಂದ ಅವರು, ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಅನುಷ್ಠಾನ ಕಾರ್ಯದಲ್ಲಿ ವಿಳಂಬ ಮಾಡುವ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಸಿಇಒ ಡಾ.ಕೆ.ವಿದ್ಯಾಕುಮಾರಿ ಅವರಿಗೆ ನಿರ್ದೇಶಿಸಿದರು.
ಶಾಲಾ ಕೊಠಡಿಗಳ ದುರಸ್ಥಿ ಕಾರ್ಯದಲ್ಲಿಯೂ ವಿಳಂಬ ಧೋರಣೆಯಿದೆ, ದುರಸ್ಥಿ ಕಾರ್ಯವೂ ಸಮರ್ಪಕವಾಗಿ ನಡೆಯದಿರುವುದು ಬೇಸರ ತಂದಿದೆ ಎಂದ ಸಚಿವರು, ಶಾಲಾ ಕೊಠಡಿಗಳ ದುರಸ್ಥಿ ಕಾರ್ಯವನ್ನು ಕೂಡಲೇ ಮುಗಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 22 ತಾಯಿ ಮರಣ, 154 ಶಿಶು ಮರಣ ಪ್ರಕರಣ ವರದಿಯಾಗಿರುವ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ತಾಯಿ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸಲು ಆರೋಗ್ಯ ಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸುವ ಕಾರ್ಯ ಕ್ಷಮತೆ ಹೆಚ್ಚಿಸಿ ಜಿಲ್ಲಾಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಯಾವುದೇ ವೈದ್ಯಾಧಿಕಾರಿ ಹುದ್ದೆ ಖಾಲಿಯಿಲ್ಲ, ಹೆಚ್ಚುವರಿಯಾಗಿ ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿಸಿದ್ದರೂ ಆರೋಗ್ಯ ಸೇವೆ ಉತ್ತಮವಾದ ಸ್ಥಿತಿಯಲ್ಲಿಲ್ಲ. ಆರೋಗ್ಯ ಸೇವೆ ಮತ್ತಷ್ಟು ಉತ್ತಮವಾಗಬೇಕು, ತಾಯಿ- ಶಿಶು ಮರಣ ಪ್ರಮಾಣವನ್ನು ಸಂಪೂರ್ಣವಾಗಿ ತಗ್ಗಿಸಬೇಕು. ಬಡವರಿಗೂ ಸಮಗ್ರವಾಗಿ ಆರೋಗ್ಯ ಸೇವೆ ಸಿಗಬೇಕೆಂಬ ಉದ್ದೇಶದಿಂದ ಜಾರಿಗೆ ತರಲಾಗಿರುವ ಆರೋಗ್ಯ ಕಾರ್ಡ್ ಯೋಜನೆಯೂ ಯಶಸ್ವಿಯಾಗಿಲ್ಲ, ಪ್ರತಿ ತಾಲೂಕಿನಲ್ಲಿಯೂ ಹೆಚ್ಚು ಹೆಚ್ಚು ಆರೋಗ್ಯ ಕಾರ್ಡ್ ಮುದ್ರಿಸಿಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಶಾಸಕ ಡಾ.ರಂಗನಾಥ್ ಮಾತನಾಡಿ, ತಾಲೂಕು ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಶುಶ್ರೂಷಕಿಯರು ಇಲ್ಲದಿರುವುದರಿಂದ ಶೀಘ್ರವೇ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯಡಿ ನಿರ್ಮಾಣಕ್ಕಾಗಿ ಮಂಜೂರಾಗಿರುವ ವಿವಿಧ ಸಮುದಾಯ ಭವನಗಳ ನಿರ್ಮಾಣ ಪ್ರಗತಿ ಕಾರ್ಯ 2017- 18ನೇ ಸಾಲಿನಿಂದಲೂ ಬಾಕಿಯಿದೆ. ಭವನಗಳ ನಿರ್ಮಾಣವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಪರಿಶಿಷ್ಟ ಜಾತಿಗೆ ಒಳಪಟ್ಟಿರುವ ಸ್ಮಶಾನಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಜಿಲ್ಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.
ನರೇಗಾ ಯೋಜನೆ ಅನುಷ್ಠಾನವನ್ನು ಕೇವಲ ವೈಯಕ್ತಿಕ ಕಾಮಗಾರಿಗೆ ಸೀಮಿತಗೊಳಿಸದೆ ಸಾರ್ವಜನಿಕ ಕಾಮಗಾರಿಗಳ ಅನುಷ್ಠಾನಕ್ಕೂ ಆದ್ಯತೆ ಕೊಡಬೇಕು ಎಂದು ಸಚಿವರು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗೆ ಸೂಚಿಸಿದರು. ಈ ವೇಳೆ ಶಾಸಕ ಮಸಾಲೆ ಜಯರಾಮ್ ಮಾತನಾಡಿ, ನರೇಗಾ ಯೋಜನೆಯಡಿ ತಾಲೂಕಿನಲ್ಲಿ ಬಹಳಷ್ಟು ಅವ್ಯವಹಾರ ನಡೆಯುತ್ತಿದೆ. ಪಿಡಿಒಗಳು ನರೇಗಾ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಉದಾಸೀನ ತೋರುತ್ತಿದ್ದಾರೆ. ಜನಪ್ರತಿನಿಧಿಗಳಿಗೂ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನರೇಗಾ ಯೋಜನಾ ಅನುಷ್ಠಾನದ ಸಂಪೂರ್ಣ ಮಾಹಿತಿಯನ್ನು ಕರಪತ್ರದಲ್ಲಿ ಮುದ್ರಿಸಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಹಂಚಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್‌ಸಿಂಗ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜೇಶ್‌ಗೌಡ, ಡಾ.ರಂಗನಾಥ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಹೊಸ ಅರ್ಜಿ ಕರೆದು ವಾಹನ ನೀಡಿ
ಪ್ರವಾಸೋದ್ಯಮ ಇಲಾಖೆಯಲ್ಲಿ ವಾಹನ ವಿತರಣೆ ಸೌಲಭ್ಯದಲ್ಲಿ ಅವ್ಯವಹಾರ ನಡೆದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಲಾಗಿತ್ತು. ಆ ವಾಹನ ಸೌಲಭ್ಯ ವಿತರಣೆ ರದ್ದುಪಡಿಸಿ ಹೊಸದಾಗಿ ಅರ್ಜಿ ಕರೆದು ವಾಹನ ವಿತರಣೆಗೆ ಕ್ರಮ ವಹಿಸಬೇಕು. ಈಗಾಗಲೇ ಆಯ್ಕೆಯಾಗಿರುವ ನೈಜ ಫಲಾನುಭವಿಗಳಿನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಅವ್ಯವಹಾರದ ವಾಸನೆ ಕಂಡುಬಂದ ಫಲಾನುಭವಿಗಳನ್ನು ಕೈಬಿಡಬೇಕು. ಆಯ್ಕೆಯಾದ ಫಲಾನುಭವಿಗಳ ಮಾಹಿತಿಯನ್ನು ಆಯಾ ವ್ಯಾಪ್ತಿಯ ಜನಪ್ರತಿನಿಧಿಗಳಿಗೆ ಒದಗಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಗೌರಿ ಅವರಿಗೆ ಸಚಿವ ಮಾಧುಸ್ವಾಮಿ ಸೂಚಿಸಿದರು.
ಮದಲೂರು ಕೆರೆಗೆ ನೀರು ಬಿಟ್ಟಿದ್ದೇವೆ: ಮಾಧುಸ್ವಾಮಿ
ತುಮಕೂರು: ಶಿರಾ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನಾಲೆಯಿಂದ ಹರಿಸಬೇಕಿದ್ದ 0.9 ಟಿಎಂಸಿ ನೀರಿನ ಪೈಕಿ 0.4 ಟಿಎಂಸಿ ನೀರನ್ನು ಮದಲೂರು ಕೆರೆಗೆ ಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಂಗಳವಾರದಿಂದಲೇ ನಾಲೆಯಲ್ಲಿ ನೀರನ್ನು ಹರಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಜಿಲ್ಲಾ ಪಂಚಾಯತಿ ಕೆಡಿಪಿ ಸಭೆಯ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ಶಿರಾ ತಾಲ್ಲೂಕಿನ ಮದಲೂರು ಕೆರೆ ಸೇರಿದಂತೆ 11 ಕೆರೆಗಳಿಗೆ 0.4 ಟಿಎಂಸಿ ನೀರನ್ನು ಹರಿಸಲಾಗುವುದು ಎಂದರಲ್ಲದೆ ಈ ಮೊದಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕಳ್ಳಂಬೆಳ್ಳ, ಶಿರಾ, ಯಲಿಯೂರು, ತಾವರೆಕೆರೆ ಭಾಗದ ಗ್ರಾಮಗಳ ಕೆರೆಗಳಿಗೆ ನಾಲೆಯ ನೀರು ಹರಿಸಲು ಆದ್ಯತೆ ನೀಡಲಾಗಿತ್ತು. ಆದರೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಭಾಗದ ಶಿರಾ, ಕಳ್ಳಂಬೆಳ್ಳ ಸೇರಿದಂತೆ ಇತರೆ ಕೆರೆಗಳು ಕೋಡಿ ಬಿದ್ದಿವೆ, ಈಗಾಗಲೇ ಹರಿಸಲಾಗಿರುವ ಉಳಿಕೆಯಾದ ನೀರನ್ನು ಮದಲೂರು ಕೆರೆಗೆ ಹರಿಸಲಾಗುತ್ತಿದೆ ಎಂದರಲ್ಲದೇ ಸ್ವಾಭಾವಿಕವಾಗಿ ಮಳೆ ನೀರು ಸೇರಿದಂತೆ ಕೆರೆ ಕೋಡಿ ಬೀಳುವವರೆಗೆ ಕೆರೆಗಳಿಗೆ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿರಾ ತಾಲ್ಲೂಕಿನಲ್ಲಿ ಈ ಮುಂಚೆ ಮಳೆ ಇಲ್ಲದ ಕಾರಣ ಶೇಂಗಾ ಬೆಳೆ ನೆಲ ಕಚ್ಚಿದು ಬೆಳೆ ವಿಮೆಗೆ ನೋಂದಾಯಿಸಿರುವ ರೈತರಿಗೆ ಪರಿಹಾರ ನೀಡಲಾಗುವುದು. ವಿಮೆಗೊಳಪಡಿಸದ ರೈತರಿಗೆ ನೀಡುವ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ತುಮಕೂರು ಗ್ರಾಮಾಂತರದ ಕೆರೆಗಳಿಗೆ ಇನ್ನೂ ನೀರು ಹರಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಗ್ರಾಮಾಂತರ ಭಾಗದ ಕೆರೆಗಳಿಗೆ ಸರ್ಮಪಕವಾಗಿ ನೀರು ಹರಿಯುತ್ತಿದ್ದು, ನೀರು ಹರಿಯದಿರುವ ಕೆರೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನೀರು ಹರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಮಾರ್ಕೋನಹಳ್ಳಿ ಡ್ಯಾಂನಿಂದ ಒಂದು ಟಿಎಂಸಿ ನೀರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ನೀಡಲಾಗುತ್ತಿದೆ. ಶಾಸಕರ ಒಪ್ಪಿಗೆಯಿಂದಲೇ ನಾಗಮಂಗಲಕ್ಕೆ ನೀರನ್ನು ಹರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
Comments are closed.