ತುಮಕೂರು: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು.
ನಗರದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಹಾಗೂ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಕಿತ್ತೂರು ರಾಣಿ ಚೆನ್ನಮ್ಮ, ಜಾನ್ಸಿರಾಣಿ ಲಕ್ಷ್ಮಿಬಾಯಿ ರವರ ದಿನಾಚರಣೆ ಆಚರಿಸುತ್ತಿರುವ ಬಗ್ಗೆ ನಾವೆಲ್ಲರೂ ಅರ್ಥ ಮಾಡಿಕೊಂಡಾಗ ಮಾತ್ರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದರು.
ಈ ಮಹಾನ್ ಹೋರಾಟಗಾರರ ವಿಚಾರವನ್ನು ಮನನ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಸಾಹಿತ್ಯವನ್ನು ಓದಿ ಸಾಮಾಜಿಕ ಚಿಂತನೆಯನ್ನು ಹೇಗೆ ಬೆಳೆಸಿಕೊಳ್ಳುತ್ತೇವೆಯೋ ಅದೇ ರೀತಿ ಮಹನೀಯರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಧನೆ ಕ್ಲಿಷ್ಟಕರ ಸಂದರ್ಭದಲ್ಲಿ ನಿಭಾಯಿಸಲು ಶಕ್ತಿ ನೀಡುತ್ತದೆ. ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಚರಿತ್ರೆ ಓದಿದರೆ ಅವರ ಸಾಹಸಗಾಥೆ ತಿಳಿಯುತ್ತದೆ, ಬ್ರಿಟೀಷರನ್ನು ಹಿಮ್ಮೆಟ್ಟಿಸಲು ಕಿತ್ತೂರು ರಾಣಿ ಚೆನ್ನಮ್ಮನವರು ಹೋರಾಡಿದ ಪರಿಯನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.
ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷೆ ಬಿ.ಸಿ.ಶೈಲಾನಾಗರಾಜು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ಮಹಿಳೆಯಾಗಿ ಇಡೀ ಕನ್ನಡ ನಾಡನ್ನು ಪ್ರತಿನಿಧಿಸಿ ಬ್ರಿಟೀಷರ ವಿರುದ್ಧ ಹೋರಾಡಿದ್ದಾರೆ. ಇವರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
ಧೀರದ್ಧಾರದ ನಡೆ ಚೆನ್ನಮ್ಮ ಅವರಲ್ಲಿತ್ತು, ವೀರೋಚಿತವಾದ ಚೆನ್ನಮ್ಮನವರ ಮಾತುಗಳು, ಬ್ರಿಟೀಷರಿಗೆ ನೀಡಿದ ಸಂದೇಶ ಇಂದು ನಮಗೆ ಮತ್ತು ನಮ್ಮ ಮಕ್ಕಳಿಗೆ ಮಾದರಿಯಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಶ್ರೀನಿವಾಸ್ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮನವರ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.
ಸಾಹಿತ್ಯ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸ ಮಾಡುವ ಹೊಣೆ ನಮ್ಮೆಲ್ಲರ ಮೇಲಿದೆ. ಇಂತಹ ಜಯಂತಿಗಳಲ್ಲಿ ಮಕ್ಕಳು ಸಹ ಭಾಗವಹಿಸಿ ಅವರ ಸಾಹಸಗಾಥೆಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದರು.
ಚೆನ್ನಮ್ಮನವರು ಬ್ರಿಟೀಷರಿಗೆ ಯಾವುದೇ ಕಪ್ಪಕಾಣಿಕೆ ನೀಡದೆ ಜೀವನಪೂರ್ತಿ ಹೋರಾಡಿದ ಬಗ್ಗೆ ಮಕ್ಕಳಿಗೆ ತಿಳಿಸಬೇಕಾಗಿದೆ. ಈ ಕಾರ್ಯವನ್ನು ಪೋಷಕರು ಮಾಡಬೇಕು ಎಂದು ಹೇಳಿದರರು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಂ.ಜಿ.ಸಿದ್ದರಾಮಯ್ಯ, ಬಾ.ಹ.ರಮಾಕುಮಾರಿ, ಬಿ.ಸಿ.ಶೈಲಾನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಶ್ರೀನಿವಾಸ್, ಸುರೇಶ್ ಕುಮಾರ್ ಮತ್ತಿತರರು ಇದ್ದರು.
ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟ ಮರೆಯುವಂಥದ್ದಲ್ಲ
Get real time updates directly on you device, subscribe now.
Comments are closed.