ಹಸಿರು ಪಟಾಕಿ ಮಾತ್ರ ಮಾರಾಟ ಮಾಡಿ: ಡೀಸಿ ಸೂಚನೆ

166

Get real time updates directly on you device, subscribe now.

ತುಮಕೂರು: ಸವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚನೆ ನೀಡಿದ್ದಾರೆ.
ಅಧಿಕೃತ ಪಟಾಕಿ ಮಾರಾಟಗಾರರು ಹಸಿರು ಪಟಾಕಿ ಹೊರತು ಪಡಿಸಿ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದಾಗಲಿ, ಹಚ್ಚುವುದಾಗಲಿ ಮಾಡುವಂತಿಲ್ಲ. ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್‌ 10ರವರೆಗೆ ಮಾತ್ರ ತೆರೆಯಬೇಕು. ಪರವಾನಿಗೆದಾರರು, ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಬೇರೆ ಸ್ಥಳ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.
ಪರವಾನಗಿ ವಿತರಣೆಗೆ ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳು, ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಪ್ರಧಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಅನುಮತಿ ನೀಡಬೇಕು. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್‌ ಅಂತರವಿರಬೇಕು.
ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಜೇಷನ್‌ ಮಾಡಬೇಕು. ಪಟಾಕಿಗಳ ಖರೀಗೆ ಬರುವವರಿಗೆ ನ್ಯಾನಿಟೈಸರ್‌ ಹಾಗೂ ಥರ್ಮಲ್‌ ಪ್ರೀಮಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಬೇಕು.
ಜನದಟ್ಟಣೆಯಾಗದಂತೆ ಪಟಾಕಿ ಖರೀದಿಗೆ ಕ್ರಮ ವಹಿಸಬೇಕು. ಹಸಿರು ಪಟಾಕಿ ಕುರಿತು ಸರ್ಕಾರ ನೀಡಲಾದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
ಕೋವಿಡ್‌-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ, ಪೊಲೀಸ್‌, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂರ್ತಣ ಮಂಡಳಿ, ಅಗ್ನಿ ಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು.
ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 188ರ ಅಡಿಯಲ್ಲಿ ಶಿಸ್ತು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್‌ -19 ತಡೆಗಟ್ಟುವ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!