ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

ಎಂ ಎಲ್‌ ಸಿ ಎಲೆಕ್ಷನ್ ಗೆ ಬ್ಯಾಲೆಟ್‌ ಪೇಪರ್‌ ಬಳಕೆ

276

Get real time updates directly on you device, subscribe now.

ತುಮಕೂರು: ಕರ್ನಾಟಕ ವಿಧಾನ ಪರಿಷತ್ ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿರುವ ಸದಸ್ಯರ ಪದಾವಧಿಯು 2022ರ ಜನವರಿ 5ಕ್ಕೆ ಮುಕ್ತಾಯಗೊಳ್ಳಲಿದ್ದು, ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ತೆರವಾಗುವ ಸದಸ್ಯ ಸ್ಥಾನಕ್ಕೆ ಡಿಸೆಂಬರ್‌ 10 ರಂದು ಚುನಾವಣೆ ನಡೆಸಲು ಮಾದರಿ ನೀತಿ ಸಂಹಿತೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್‌ ಚುನಾವಣೆ ಸಂಬಂಧ ಜರುಗಿದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯು ನವೆಂಬರ್‌ 11 ರಂದು ಜಾರಿಗೆ ಬಂದಿದೆ. ಈ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ತಾಲೂಕಿಗೆ ಒಂದರಂತೆ ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳನ್ನು ರಚಿಸಲಾಗಿದೆ ಎಂದರು.
ಚುನಾವಣಾ ವೇಳಾ ಪಟ್ಟಿ ಅನ್ವಯ ನವೆಂಬರ್‌ 16 ರಿಂದ 23ರ ವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತ್ತು 30 ವರ್ಷ ಮೇಲ್ಪಟ್ಟ ಮತದಾರರು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಾಮಪತ್ರಗಳ ಪರಿಶೀಲನೆ ಕಾರ್ಯ ನವೆಂಬರ್‌ 24 ರಂದು ನಡೆಯಲಿದ್ದು, ನವೆಂಬರ್‌ 26 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ, ಡಿಸೆಂಬರ್‌ 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿಸೆಂಬರ್‌ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯು ಡಿಸೆಂಬರ್‌ 16 ರೊಳಗೆ ಮುಕ್ತಾಯಗೊಳ್ಳಲಿದೆ ಎಂದರು.
ಸದರಿ ಚುನಾವಣೆಯು ಬ್ಯಾಲೆಟ್‌ ಪೇಪರ್‌ ಮೂಲಕ ನಡೆಯಲಿದೆ, ಪ್ರತಿಯೊಬ್ಬ ಮತದಾರನಿಗೆ ಚುನಾವಣೆಗೆ ಸ್ವರ್ಧಿಸುವ ಅಭ್ಯರ್ಥಿಗಳ ಸಂಖ್ಯೆಗೆ ಅನುಸಾರ ಪ್ರಾಶಸ್ತ್ಯ ಮತಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಚುನಾವಣೆಗೆ ಬ್ಯಾಲೆಟ್‌ ಬಾಕ್ಸ್ ಗಳನ್ನು ಬಳಸಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್‌ ಚುನಾವಣೆಗೆ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್‌, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌, ತುಮಕೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ ಸದಸ್ಯರು ಮತದಾರರಾಗಿರುತ್ತಾರೆ ಎಂದು ಹೇಳಿದರು.
ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎಲ್ಲಾ ರಾಜಕೀಯ ಪಕ್ಷದವರು ತಮ್ಮ ಬಿ ಎಲ್ ಎ, ಪ್ರತಿನಿಧಿಗಳ ಮೂಲಕ 80 ವರ್ಷ ಮೇಲ್ಪಟ್ಟ ಮತದಾರರ ಮನೆಗಳಿಗೆ ಭೇಟಿ ನೀಡಿ ಮತದಾರರು ಜೀವಂತ ಇರುವ, ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿ ಖಾತ್ರಿ ಪಡಿಸಿಕೊಳ್ಳಬೇಕು. ಪರಿಶೀಲನೆ ವೇಳೆ ಮತದಾರರು ಮೃತಪಟ್ಟಿರುವುದು ಕಂಡುಬಂದಲ್ಲಿ ಅಥವಾ ಖಾಯಂ ಸ್ಥಳಾಂತರಗೊಂಡಿದ್ದಲ್ಲಿ ಅವರ ಸಂಬಂಧಿಕರಿಂದ ನಮೂನೆ 7 ನ್ನು ಪಡೆದು ಅವರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಮತದಾರರ ಕರಡು ಪಟ್ಟಿಯನ್ನು ನವೆಂಬರ್‌ 8 ರಂದು ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ತಾಲೂಕು ತಹಸೀಲ್ದಾರ್‌ ಕಚೇರಿಗಳಲ್ಲಿ ಪ್ರಚುರಪಡಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 8ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್‌ 8 ರೊಳಗಾಗಿ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್‌ 27 ರೊಳಗಾಗಿ ವಿಲೇವಾರಿ ಮಾಡಿ, 2022ರ ಜನವರಿ 13 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.
ಮತದಾರ ಪಟ್ಟಿಗಳ ಪರಿಷ್ಕರಣೆ ಸಂಬಂಧ ಸಾರ್ವತ್ರಿಕ ರಜಾ ದಿನಗಳಾದ ನವೆಂಬರ್‌ 14, 21 ಹಾಗೂ 28ರಂದು ವಿಶೇಷ ಆಂದೋಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಗಧಿತ ದಿನಗಳಂದು ಬಿ ಎಲ್ ಒ ಗಳು ಮತಗಟ್ಟೆಗಳಲ್ಲಿ ಹಾಜರಿದ್ದು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿರುವ 2683 ಮತಗಟ್ಟೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ಬಿ ಎಲ್ ಒ ಗಳ ಕಾರ್ಯಕ್ಕೆ ಎಲ್ಲಾ ರಾಜಕೀಯ ಪಕ್ಷದವರೂ ಸಹಕಾರ ನೀಡಬೇಕು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 11,15,260 ಪುರುಷರು, 11,12,523 ಮಹಿಳೆಯರು ಹಾಗೂ ಇತರೆ 112 ಸೇರಿ ಒಟ್ಟು 22,27,895 ಮತದಾರರಿದ್ದಾರೆ. ವಿವಾಹಿತ ಹೆಣ್ಣು ಮಕ್ಕಳು ತಮ್ಮ ಹೆಸರನ್ನು ಇನ್ನೂ ತಂದೆ ಮನೆಯ ವಿಳಾಸದ ಮತದಾರರ ಪಟ್ಟಿಯಲ್ಲಿಯೇ ಉಳಿಸಿಕೊಂಡಿದ್ದು, ಅಂತಹವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಭಾರತ ಚುನಾವಣಾ ಆಯೋಗವು ಮತದಾರರ ಅನಕೂಲಕ್ಕಾಗಿ ಹೆಲ್ಪ್ ಲೈನ್‌ ಆ್ಯಪ್‌ ತಂತ್ರಾಂಶ ಬಿಡುಗಡೆಗೊಳಿಸಿದ್ದು, ಈಗಾಗಲೇ ನೋಂದಣಿಯಾಗಿರುವ ಮತದಾರರು ತಮ್ಮ ಹೆಸರು, ವಿಳಾಸ ಇತ್ಯಾದಿಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಹೊಸದಾಗಿ ನೋಂದಣಿ ಮಾಡಲು ಇಚ್ಛಿಸುವ ಯುವ, ಇತರೆ ಅರ್ಹ ಮತದಾರರು ವೋಟರ್‌ ಹೆಲ್ಪ್ ಲೈನ್‌ ಆ್ಯಪ್‌ ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ರಾಜಕೀಯ ಪಕ್ಷಗಳ ಮುಖಂಡರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!