ತುಮಕೂರು: ಕೋವಿಡ್-19 ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ನಿಗಾವಹಿಸಿ ಕಟ್ಟೆಚ್ಚೆರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಗರದ ಶ್ರೀಸಿದ್ದಗಂಗಾ ಮಠಕ್ಕೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್- 19 ಅಲ್ಲಲ್ಲಿ ಕಂಡುಬರುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ, ಸೋಂಕು ಹೆಚ್ಚಾಗುವ ಪ್ರದೇಶಗಳಲ್ಲಿ ಕಂಟೇನ್ಮೆಂಟ್ ವಲಯಗಳನ್ನು ಮಾಡಿ, ಸೋಂಕು ದೃಢಪಟ್ಟವರ ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆ, ಸಂಪರ್ಕಿತರಲ್ಲಿ ಸೋಂಕಿನ ಲಕ್ಷಣಗಳಿದ್ದಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕೋವಿಡ್ ಸೋಂಕಿನ ಕೆಲವು ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಬರುವ ಪ್ರತಿಯೊಬ್ಬರನ್ನು ಪರೀಕ್ಷಿಸಲಾಗುತ್ತಿದ್ದು, ನೆಗೆಟಿವ್ ವರದಿ ಬಂದ ನಂತರವೇ ನಗರ ಪ್ರವೇಶಕ್ಕೆ ಅವಕಾಶ ನೀಡಲು ಸೂಚನೆ ನೀಡಲಾಗಿದೆ ಎಂದರು.
ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರ ಮೇಲೆಯೂ ದೊಡ್ಡ ಪ್ರಮಾಣದಲ್ಲಿ ನಿಗಾ ಇರಿಸಲಾಗಿದೆ, ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕೇರಳದ ವಿದ್ಯಾರ್ಥಿಗಳು, ನರ್ಸಿಂಗ್ ಸಿಬ್ಬಂದಿ ಬಗ್ಗೆಯೂ ನಿಗಾ ವಹಿಸಲಾಗುತ್ತಿದೆ ಎಂದರು.
ಕೊರೊನಾ ವೈರಸ್ ನ ಹೊಸ ರೂಪಾಂತರ ತಳಿಯ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ನಿರ್ದೇಶನಗಳಂತೆ ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಶಾಲಾ ಕಾಲೇಜುಗಳ ಮೇಲೆಯೂ ನಿಗಾ ವಹಿಸಿದ್ದು, ಎಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ ಅಲ್ಲಿ ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಬೆಳೆ ಹಾನಿಗೆ ಪರಿಹಾರ: ಮಳೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ. ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ ಒಂದು ತಂಡವನ್ನು ಕಳುಹಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಸಮೀಕ್ಷಾ ಕಾರ್ಯವನ್ನು ಸಹ ಕೈಗೊಳ್ಳಲಾಗಿದೆ ಎಂದರು.
ಬೆಳೆ ಹಾನಿಗೆ 685 ಕೋಟಿ ರೂ. ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆ್ಯಪ್ ನಲ್ಲಿ ಮಾಹಿತಿ ಅಪ್ ಲೋಡ್ ಮಾಡಿದವರಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದರು.
ಈ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್, ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಇತರರಿದ್ದರು.
ಶಾಲೆಗಳನ್ನು ಬಂದ್ ಮಾಡಲ್ಲ: ಸಚಿವ ನಾಗೇಶ್
ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ ಮೇಲೆ ಶಾಲೆಗಳನ್ನು ಮುಚ್ಚುವ ತೀರ್ಮಾನ ಮಾಡಲಾಗುವುದು. ಸದ್ಯಕ್ಕಂತೂ ಆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದರು.
ಕೋವಿಡ್ ವಿಚಾರವಾಗಿ ತಾಂತ್ರಿಕ ಸಲಹಾ ಸಮಿತಿ ನೀಡುವ ನಿರ್ಧಾರವನ್ನು ಸ್ವೀಕರಿಸಿ, ಆ ನಂತರ ಶಾಲೆಗಳನ್ನು ಏನು ಕ್ರಮ ಜಾರಿಗೊಳಿಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ ಈವರೆಗೂ ತಾಂತ್ರಿಕ ಸಮಿತಿ ಯಾವುದೇ ಗಾಬರಿ ವರದಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಕೆಲವು ಕಡೆ ಶಾಲೆಗಳಲ್ಲಿ ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿದೆ, ಸರಕಾರ ಸಂಪೂರ್ಣ ಜವಾಬ್ದಾರಿಯಿಂದ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಪೋಷಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ, ಸರಕಾರ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ, ಅರ್ಧ ಗಂಟೆಗೊಮ್ಮೆ ಎಲ್ಲಾ ಡಿಡಿಪಿಐಗಳಿಂದ ಮಾಹಿತಿ ಪಡೆಯುತ್ತಿದ್ದೇವೆ ಎಂದು ಹೇಳಿದರು.
ಶಾಲೆಗಳಿಗೆ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು, ಈ ಬಗ್ಗೆ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ, ಶಾಲಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡುವ ಕುರಿತು ಸಹ ಆದೇಶಿಸಲಾಗಿದೆ, ಮಕ್ಕಳ ಆರೋಗ್ಯದ ಬಗ್ಗೆ ಸರಕಾರವೂ ಕಾಳಜಿ ವಹಿಸಿದೆ. ವಿನಾ ಕಾರಣ ಪೋಷಕರು ಗಾಬರಿಯಾಗುವುದು ಬೇಡ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಲಕ್ಷ್ಮೀಶ್, ರವಿಶಂಕರ್ ಹೆಬ್ಬಾಕ, ಎಪಿಎಂಸಿ ಅಧ್ಯಕ್ಷ ಉಮೇಶ್ ಗೌಡ ಇದ್ದರು.
Comments are closed.