ತುಮಕೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತದಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 338 ಮತಕೇಂದ್ರ ಸ್ಥಾಪಿಸಲಾಗಿದ್ದು, ಈ ಪೈಕಿ 194 ಸಾಮಾನ್ಯ, 95 ಸೂಕ್ಷ್ಮ ಹಾಗೂ 49 ಅತಿಸೂಕ್ಷ್ಮ ಮತಕೇಂದ್ರಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತ ಕೇಂದ್ರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿಯೂ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ 2623 ಪುರುಷರು ಹಾಗೂ 2936 ಮಹಿಳೆಯರು ಸೇರಿದಂತೆ ಒಟ್ಟು 5559 ಮತದಾರರು ಮತದಾನ ಮಾಡಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪ್ರತಿ ಮತಕೇಂದ್ರಕ್ಕೂ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾರರನ್ನು ಗುರುತು ಹಚ್ಚುವ ಅಧಿಕಾರಿಗಳು ಹಾಗೂ ವೀಕ್ಷಕರು ಸೇರಿದಂತೆ ಒಟ್ಟು 1200 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ನಿಯಮಾವಳಿಗಳನ್ವಯ ಮತದಾನದ ಹಿಂದಿನ ದಿನವೇ ಮತಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಮತದಾನ ಕೇಂದ್ರದ ಒಳಗೆ ಮತದಾರರು ಬರುವಾಗ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿ, ಮಾಸ್ಕ್ ಧರಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಆಶಾ ಕಾರ್ಯಕರ್ತೆಯರು, ಎಎನ್‌ಎಂಗಳನ್ನು ನಿಯೋಜಿಸಲಾಗಿದೆ ಎಂದರಲ್ಲದೆ ಮತಚಲಾವಣೆಗೆ ಬರುವ ಎಲ್ಲಾ ಮತದಾರರು ಕಡ್ಡಾಯವಾಗಿ ಕನಿಷ್ಟ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸುದ್ದಿಗಾರರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ನಗರದ ಸಿದ್ಧಗಂಗಾ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಒಟ್ಟು 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕಳೆದ ವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗಿ 1 ಅಥವಾ 2 ಪ್ರಕರಣ ಮಾತ್ರ ವರದಿಯಾಗಿದೆ ಎಂದರಲ್ಲದೆ, ಜಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ. ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದರೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿ ರಾಹುಲ್ ಕುಮಾರ್ ಷಹಪುರವಾಡ್ ಮಾತನಾಡಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ 338 ಮತ ಕೇಂದ್ರಗಳಲ್ಲಿಯೂ ಶಾಂತಿಯುತ ಮತದಾನಕ್ಕಾಗಿ ಸುಮಾರು 600 ಮಂದಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈಗಾಗಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಜರಿದ್ದರು.
ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ
Get real time updates directly on you device, subscribe now.
Prev Post
Next Post
Comments are closed.