ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸಿ: ಜ್ಯೋತಿಗಣೇಶ್

15-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ಕಾರ್ಯಕ್ರಮ

317

Get real time updates directly on you device, subscribe now.

ತುಮಕೂರು: ಕೊರೊನಾ ಮಹಾಮಾರಿಯಿಂದ ಮಕ್ಕಳನ್ನು ರಕ್ಷಿಸಲು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನಗರದ ಎಂಪ್ರೆಸ್‌ ಪದವಿ ಪೂರ್ವ ಕಾಲೇಜಿನಲ್ಲಿ 15-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕೋವಿಡ್‌ ಸೋಂಕು ಹರಡುವಿಕೆ ತಡೆಗಟ್ಟಲು 15-18 ವರ್ಷದ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ 15- 18 ವರ್ಷದ 1.25 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮಕ್ಕಳಿಗೆ ಲಸಿಕೆ ನೀಡಲು ಅನುವಾಗುವಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೋವಿಡ್‌ ಲಸಿಕೆ ನೀಡಲು ಅಧಿಕಾರಿಗಳು ಯೋಜನೆ ರೂಪಿಸಿದ್ದು, ಪೋಷಕರು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಕೊಡಿಸಬೇಕು ಎಂದು ಮನವಿ ಮಾಡಿದರು.
ಜಗತ್ತಿನಲ್ಲಿ ಓಮಿಕ್ರಾನ್‌ ಮತ್ತು ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಲಸಿಕೆ ಪಡೆಯುವುದು ಅತ್ಯವಶ್ಯಕವಾಗಿದ್ದು, ಮೊದಲನೇ ಮತ್ತು ಎರಡನೇ ಡೋಸ್‌ ಲಸಿಕೆಯನ್ನು ನಿಗದಿತ ಅವಧಿಯಲ್ಲಿ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರಲ್ಲದೆ ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಹರಡುತ್ತಿದ್ದು, ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಬೇಕು, ತಜ್ಞರ ಅಂದಾಜಿನಂತೆ ಮಾರ್ಚ್‌ ಮಾಹೆಯಲ್ಲಿ ಸೋಂಕು ಹೆಚ್ಚಳವಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಮೊದಲ ಹಾಗೂ ಎರಡನೇ ಡೋಸ್‌ ಕೋವಿಡ್‌ ಲಸಿಕಾಕರಣವನ್ನು ಶೇ.98 ರಷ್ಟು ಪೂರ್ಣಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ನೀಡಿರುವ ಸೂಚನೆಯನ್ವಯ ಯಾವುದೇ ತಪ್ಪು ಕಲ್ಪನೆಗೆ ಒಳಗಾಗದೇ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದರು.
ನಂತರ ಎಂಪ್ರೆಸ್‌ ಕಾಲೇಜಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಿಡಿಪಿಐ ನಂಜಯ್ಯ, ಆರ್‌ಸಿಎಚ್‌ ಅಧಿಕಾರಿ ಡಾ.ಕೇಶವಮೂರ್ತಿ, ಪಿ.ಬಿ.ಬಸವರಾಜು, ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!