ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಹೆಚ್ಚು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದು, ಅಂತಹವರು ಕೋವಿಡ್ ಸೋಂಕಿತರಿಗಾಗಿ ಸರ್ಕಾರದಿಂದ ನೀಡುವ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ ಎಂದು ಕಾನೂನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆಯಿದ್ದರೂ ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ, ಜಿಲ್ಲೆಯಲ್ಲಿ ಪ್ರಸ್ತುತ 9505 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಸೋಂಕಿತರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಆರೋಗ್ಯ ವಿಚಾರಣೆಗಾಗಿ ತೆರೆದಿರುವ ತಾಲೂಕು ವಾರು ಕೋವಿಡ್ ವಾರ್ ರೂಂಗಳಿಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಸೋಂಕಿತರಿಗೆ ದೂರವಾಣಿ ಕರೆ ಮೂಲಕ ಆರೋಗ್ಯ ಸ್ಥಿತಿ ಗತಿ ವಿಚಾರಿಸಬೇಕು ಎಂದು ನಿರ್ದೇಶಿಸಿದರು.
ಕೋವಿಡ್ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೊಳಪಡಿಸುವುದರ ಹೊರತಾಗಿ ಸರ್ಕಾರದ ಆದೇಶದಂತೆ ಜನರಲ್ಲಿ ಕೋವಿಡ್ ಸಂಬಂಧಿತ ಲಕ್ಷಣ ಕಂಡುಬಂದಲ್ಲಿ ಮಾತ್ರ ಪರೀಕ್ಷೆ ಮಾಡಿಸಲು ಸೂಚಿಸಬೇಕು, ಗುಣ ಲಕ್ಷಣಗಳಿಗೆ ಅನುಗುಣವಾಗಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದ್ದು, ಸೋಂಕಿತ ಮಕ್ಕಳು ಒಂದೇ ತರಗತಿಯವರಾಗಿದ್ದಲ್ಲಿ ಆ ತರಗತಿಗಷ್ಟೇ ರಜೆ ಘೋಷಿಸಬೇಕು. ಶಾಲೆಯಲ್ಲಿ ಇಪ್ಪತ್ತಕ್ಕಿಂತ ಹೆಚ್ಚಿನ ಮಕ್ಕಳು ಸೋಂಕಿತರಾಗಿದ್ದಲ್ಲಿ ಇಡೀ ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ನಿಗಾವಹಿಸಿ ಅಗತ್ಯವಿರುವಷ್ಟು ಔಷಧಿ ದಾಸ್ತಾನು ಇಟ್ಟಿರಬೇಕು, ಆದಾಗ್ಯೂ ಔಷಧಿ ಕೊರತೆ ಕಂಡು ಬಂದಲ್ಲಿ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರಲ್ಲದೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು, ಕೊಠಡಿಗಳ ದುರಸ್ತಿ ಕಾರ್ಯಗಳಿದ್ದಲ್ಲಿ ಶೀಘ್ರ ಪೂರ್ಣಗೊಳಿಸಿ ಬಳಕೆಗೆ ಲಭ್ಯವಾಗುವಂತೆ ಮಾಡಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಲಸಿಕಾಕರಣ ಪ್ರಗತಿಗೆ ಸಂಬಂಧಿಸಿದಂತೆ ಮೊದಲನೇ ಡೋಸ್ ಲಸಿಕೆ ನೀಡಿಕೆಯು ಶೇ.99 ರಷ್ಟು ಪೂರ್ಣಗೊಂಡಿದ್ದು, ಎರಡನೇ ಡೋಸ್ ಲಸಿಕಾಕರಣ ಶೇ. 84 ರಷ್ಟು ಪೂರ್ಣಗೊಂಡಿದೆ. ಪ್ರಸ್ತುತ ಕೋವ್ಯಾಕ್ಸಿನ್ 48234 ಹಾಗೂ ಕೋವಿಶೀಲ್ಡ್ ಲಸಿಕೆಯು 94956 ಡೋಸ್ ಬಾಕಿಯಿದ್ದು, ಶೀಘ್ರದಲ್ಲೇ ಬಾಕಿ ಇರುವ ಲಸಿಕಾ ಡೋಸ್ ಗಳನ್ನು ನೀಡಿ ಶೇ.100 ರಷ್ಟು ಗುರಿ ಸಾಧಿಸಬೇಕು, ಈ ಬಗ್ಗೆ ಅಧಿಕಾರಿಗಳು ಯಾವುದೇ ರೀತಿಯ ಸಬೂಬು ಹೇಳುವಂತಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹೆಚ್ಚುತ್ತಿದ್ದರೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಪಾಲಿಕೆ ಆಯುಕ್ತೆ ರೇಣುಕಾ, ಉಪ ವಿಭಾಗಾಧಿಕಾರಿ ವಿ.ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಖಾಸಗಿ ಆಸ್ಪತ್ರೆಗೆ ಹೋದ್ರೆ ಸರ್ಕಾರಿ ಸೌಲಭ್ಯ ಕಟ್
ಕೋವಿಡ್ ಸೋಂಕಿತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಕೆ
Get real time updates directly on you device, subscribe now.
Prev Post
Next Post
Comments are closed.