ತುಮಕೂರು: ಹೆಣ್ಣು ಮಕ್ಕಳ ರಕ್ಷಣೆಗೆ ಕಾನೂನು ಕಟ್ಟಳೆಗಳಿದ್ದರೂ ಸಹ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ, ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾದಾಗ ಮಾತ್ರ ತಮ್ಮ ಮೇಲಾಗುವ ದೌರ್ಜನ್ಯವನ್ನು ಯಾರ ಸಹಾಯವೂ ಇಲ್ಲದೆ ಎದುರಿಸಿ ನಿಲ್ಲಲು ಸಾಧ್ಯ ಎಂದು ಶಾಸಕ ಜ್ಯೋತಿ ಗಣೇಶ್ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದಿಂದ ಈಗಾಗಲೇ ವಸತಿ ಶಾಲೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಆತ್ಮ ರಕ್ಷಣೆಗೆಂದು ವಿಶೇಷವಾಗಿ ನುರಿತ ತರಬೇತುದಾರರಿಂದ ಕರಾಟೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ, ಹೆಣ್ಣು ಮಕ್ಕಳಿಗೆ ಮನೆಯಿಂದ ಹೊರಗೆ ಪ್ರತಿನಿತ್ಯ ಎದುರಾಗುವ ಸಮಸ್ಯೆಗಳನ್ನು ಆತ್ಮ ಸ್ಥೈರ್ಯದಿಂದ ಧೈರ್ಯವಾಗಿ ಎದುರಿಸಲು ಈ ತರಬೇತಿ ನೆರವಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ ಕರ್ನಾಟಕ ಸರ್ಕಾರದ ಈ ಉದ್ದೇಶ ಹೆಣ್ಣು ಮಕ್ಕಳ ಆತ್ಮ ರಕ್ಷಣೆಗೆ ಸಹಾಯವಾಗುತ್ತದೆ ಹಾಗೂ ಆತ್ಮವಿಶ್ವಾಸ ಮೂಡಿಸುತ್ತದೆ, ಹೆಣ್ಣು ಮಕ್ಕಳು ಒಬ್ಬಂಟಿಯಾಗಿ ಓಡಾಡುವಾಗ ಸೂಕ್ಷ್ಮತೆಯಿಂದ ಎಲ್ಲವನ್ನು ಗಮನಿಸುತ್ತಿರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಧೀಮಂತ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ನುರಿತ ಕರಾಟೆ ತರಬೇತುದಾರರ ನಿರ್ದೇಶನದಂತೆ ವಿದ್ಯಾರ್ಥಿನಿಯರು ಕರಾಟೆ ತರಬೇತಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಮಾನಸ ಓಬವ್ವನ ವೇಷ ಧರಿಸಿ, ಓಬವ್ವನ ಒಂದು ತುಣುಕನ್ನು ಪರಿಚಯಿಸಿದಳು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ಮಹಾನಗರ ಪಾಲಿಕೆಯ ಮೇಯರ್ ಬಿ.ಜಿ.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮ.ಟಿ.ಎಲ್.ಎಸ್, ಪರಿಶಿಷ್ಟ ವರ್ಗಗಳ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತ್ಯಾಗರಾಜು.ಎನ್, ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ, ಕರ್ನಾಟಕ ವಸತಿ ಶಿಕ್ಷಣ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಕಸ್ತೂರಿ ಕುಮಾರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ವಾರ್ಡನ್‌ಗಳು, ವಸತಿಶಾಲೆ ವಿದ್ಯಾರ್ಥಿನಿಯರು ಹಾಗೂ ತರಬೇತುದಾರರು ಹಾಜರಿದ್ದರು.
Get real time updates directly on you device, subscribe now.
Prev Post
Next Post
Comments are closed.