218023 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ: ಡೀಸಿ

142

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಫೆಬ್ರವರಿ 27 ರಿಂದ ಮಾರ್ಚ್‌ 2ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ 218023 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್‌-19 ಮಾರ್ಗಸೂಚಿ ಅನುಸರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಲಸಿಕಾ ಗುಣಮಟ್ಟ ಕಾಪಾಡಲು ಫೆಬ್ರವರಿ 21 ರಿಂದ ಮಾರ್ಚ್‌ 2ರ ವರೆಗೆ ನಿರಂತರವಾಗಿ ವಿದ್ಯುತ್‌ಚ್ಛಕ್ತಿ ಸರಬರಾಜು ಮಾಡಬೇಕೆಂದು ಬೆಸ್ಕಾಂ ಅಧಿಕಾರಿಗೆ ನಿರ್ದೇಶನ ನೀಡಿದರು.
ಮನೆ- ಮನೆಗೆ ಭೇಟಿ ನೀಡಿ ಐಇಸಿ ಕರಪತ್ರ, ಭಿತ್ತಿಪತ್ರ ವಿತರಿಸಿ ಪೋಲಿಯೋ ಹನಿ ಹಾಕಿಸುವ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತೆ ನಿಯೋಜಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಅವರಿಗೆ ಸೂಚನೆ ನೀಡಿದರು.
ಲಸಿಕೆ ಹಾಕುವವರಿಗೆ ಊಟದ ವ್ಯವಸ್ಥೆ ಹಾಗೂ ಸ್ಥಳೀಯ ಸಾರಿಗೆ ವ್ಯವಸ್ಥೆ, ಪ್ರಚಾರ ಸಾಮಗ್ರಿಗಳ ವಿತರಣೆ ಹಾಗೂ ಪ್ರದರ್ಶನ ವ್ಯವಸ್ಥೆ, ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ರೋಟರಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು.
ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ವಾಹನ ಒದಗಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು. ರೈಲ್ವೇ ನಿಲ್ದಾಣ, ಬಸ್‌ ನಿಲ್ದಾಣ, ಟೋಲ್ ಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮದ ಚಾಲನೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಂದ ನೆರವೇರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಆರ್‌ಸಿಹೆಚ್‌ ಅಧಿಕಾರಿ ಡಾ: ಕೇಶವರಾಜ್‌ ಸಭೆಗೆ ಮಾಹಿತಿ ನೀಡುತ್ತಾ, ಲಸಿಕಾ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 1228 ಲಸಿಕಾ ಕೇಂದ್ರ ಹಾಗೂ 65 ಟ್ರಾನ್ಸಿಟ್‌ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ನೀಡಲು 238 ವಾಹನ ಬಳಸಿಕೊಂಡು 5025 ಆರೋಗ್ಯ ಸಿಬ್ಬಂದಿ ಹಾಗೂ ಮೇಲ್ವಿಚಾರಣೆಗಾಗಿ 277 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರಲ್ಲದೆ, ಫೆಬ್ರವರಿ 27 ರಂದು ಲಸಿಕಾ ಬೂತ್ ಗಳಲ್ಲಿ ಹಾಗೂ ಫೆಬ್ರವರಿ 28, ಮಾರ್ಚ್‌ 1 ಮತ್ತು 2ರಂದು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಡಾ.ಮೋಹನ್‌ದಾಸ್‌, ಡಾ.ಮಹಿಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!