ಬಾಲ್ಯವಿವಾಹ ತಡೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

216

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.

ತಮ್ಮ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿವಿಧ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು, ಹೋಬಳಿ ಮತ್ತು ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಬಸವ ಜಯಂತಿ ಸಂದರ್ಭದಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆಯಿದ್ದು, ಅಧಿಕಾರಿಗಳು ಬಾಲ್ಯವಿವಾಹಗಳು ನಡೆಯದಂತೆ ನಿಗಾ ವಹಿಸಬೇಕೆಂದು ನಿರ್ದೇಶನ ನೀಡಿದರು.
ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮಾತನಾಡಿ, ಸ್ವಂತ ಕಟ್ಟಡ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನೀರಿನ ಸಂಪರ್ಕ ಇಲ್ಲದಿರುವ ಕೇಂದ್ರಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಮಾರ್ಚ್ 2022ರ ಮಾಹೆಯಿಂದ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ನೀಡುವ ಆಹಾರ ಮೆನು ಸರ್ಕಾರ ನಿಗದಿಪಡಿಸಿರುವಂತೆ ಗುಣಮಟ್ಟದಿಂದ ಕೂಡಿರಬೇಕು, ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ತೂಕ ಮತ್ತು ಅಳತೆಯಲ್ಲಿ ಲೋಪ ಕಂಡು ಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಸಭೆಗೆ ಮಾಹಿತಿ ನೀಡುತ್ತಾ 2021-22ನೇ ಸಾಲಿನ ಡಿಸೆಂಬರ್ 2021ರ ಅಂತ್ಯಕ್ಕೆ ಜಿಲ್ಲೆಯಲ್ಲಿ 51 ಬಾಲ್ಯವಿವಾಹ ತಡೆಯಲಾಗಿದೆ. ಈ ಪೈಕಿ 5 ಬಾಲ್ಯವಿವಾಹ ಪ್ರಕರಣ ವರದಿಯಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ 2005ರಡಿ ಡಿಸೆಂಬರ್ 2021ರ ಅಂತ್ಯಕ್ಕೆ ಒಟ್ಟು 124 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಸಮಲೋಚನೆ ಮೂಲಕ 59 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ 47 ಹಾಗೂ ನ್ಯಾಯಾಲಯದ ಹಂತದಲ್ಲಿ 18 ಪ್ರಕರಣಗಳು ಸೇರಿ ಒಟ್ಟು 65 ಪ್ರಕರಣ ಬಾಕಿ ಇವೆ ಎಂದು ಮಾಹಿತಿ ನೀಡಿದರು.
ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಲೋಚನೆ, ವೈದ್ಯಕೀಯ, ಕಾನೂನು ಸಲಹೆ ಹಾಗೂ ಪೊಲೀಸ್ ನೆರವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಸಾಂತ್ವನ ಯೋಜನೆಯಡಿ ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 2021ರ ಅಂತ್ಯಕ್ಕೆ ದಾಖಲಾದ 873 ಪ್ರಕರಣಗಳ ಪೈಕಿ ಸಮಾಲೋಚನೆ ಮೂಲಕ 844 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 29 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!