ತುಮಕೂರು: ಪ.ಜಾತಿ, ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜರುಗುವ ಸಭೆಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಪ.ಜಾತಿ ಮತ್ತು ವರ್ಗದವರ ಅಭಿವೃದ್ಧಿಗಾಗಿ ನಿಗದಿಯಾಗಿದ್ದ ಅನುದಾನ ಬಳಕೆಗೆ ಸಂಬಂಧಿಸಿದಂತೆ ವರ್ಷಾಂತ್ಯಕ್ಕೆ ಸಾಧಿಸಿದ ಇಲಾಖಾವಾರು ಪ್ರಗತಿ ಪರಿಶೀಲಿಸಿದ ಅವರು ಕಡಿಮೆ ಹಾಗೂ ಶೂನ್ಯ ಪ್ರಗತಿ ಸಾಧಿಸಿದ ತಿಪಟೂರು ನಗರಸಭೆ, ಚಿಕ್ಕನಾಯಕನಹಳ್ಳಿ ಪುರಸಭೆ, ಗುಬ್ಬಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ಕಡಿಮೆ ಸಾಧನೆಗೆ ಕಾರಣವೇನೆಂದು ಮಾಹಿತಿ ಪಡೆದರಲ್ಲದೆ, ನಿಗದಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತುಮಕೂರು ಮಹಾನಗರ ಪಾಲಿಕೆ, ಕೊರಟಗೆರೆ ಪಟ್ಟಣ ಪಂಚಾಯತಿ, ಶಿರಾ ನಗರಸಭೆಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾಯತ್ ರಾಜ್ ಇಲಾಖೆ, ತೋಟಗಾರಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಕಾರ, ಮೀನುಗಾರಿಕೆ, ಬೆಸ್ಕಾಂ, ಪಶು ಸಂಗೋಪನೆ, ರೇಷ್ಮೆ ಇಲಾಖೆಗಳು ೨೦೨೧- ೨೨ನೇ ಸಾಲಿನಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.೧೦೦ ರಷ್ಟು ವೆಚ್ಚ ಮಾಡಿ ಪರಿಶಿಷ್ಟರ ಅಭ್ಯುದಯಕ್ಕೆ ವಿನಿಯೋಗಿಸಲಾಗಿದೆ ಎಂದು ಸಂಬಂಧಿಸಿದ ಇಲಾಖಾವಾರು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಗೆ ಹಾಜರಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿರಾ ನಗರಸಭೆ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಅವರಿಗೆ ಸೂಚನೆ ನೀಡಿದರು.
ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಅಲೆಮಾರಿ ಜನಾಂಗದವರಿಗೆ ನಿವೇಶನ ಒದಗಿಸಲು ತಯಾರಿಸಿರುವ ಪಟ್ಟಿಯನ್ನು ಮರು ಪರಿಶೀಲಿಸಬೇಕೆಂದು ಮುಖ್ಯಾಧಿಕಾರಿ ನಜ್ಮಾ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಾಲ ಕಾರ್ಮಿಕತೆಯನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ಕಾರ್ಮಿಕ ಇಲಾಖೆಯಿಂದ ಹೊರತರಲಾದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲ ಕೃಷ್ಣಪ್ಪ, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ, ಕಾರ್ಮಿಕ ಅಧಿಕಾರಿ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಜರಿದ್ದರು.
Get real time updates directly on you device, subscribe now.
Prev Post
Comments are closed.