ತಾಯಿ, ಶಿಶು ಮರಣ ತಗ್ಗಿಸಲು ಕ್ರಮ ವಹಿಸಿ

ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದು ನಿಲ್ಲಿಸಿ: ಡೀಸಿ

159

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡುವ ಪ್ರಮಾಣ ಜಾಸ್ತಿಯಾಗಿದ್ದು, ಇದನ್ನು ತಗ್ಗಿಸುವ ಅಗತ್ಯವಿದೆ. ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿಯರಿಗೆ ಅಗತ್ಯ ಪರೀಕ್ಷೆ ನಡೆಸಿ, ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದನ್ನು ಕಡಿಮೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ತಾಯಿ ಮತ್ತು ಶಿಶುಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಿ ಕರ್ತವ್ಯ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ ಏಪ್ರಿಲ್ 2021 ರಿಂದ 2022ರ ಮಾರ್ಚ್ ವರೆಗೆ ಒಟ್ಟು 37 ತಾಯಿ ಮರಣ ಹಾಗೂ 23 ಶಿಶು ಮರಣ ಪ್ರಕರಣ ದಾಖಲಾಗಿದ್ದು, ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಗರ್ಭಿಣಿ ಮತ್ತು ಶಿಶುಗಳಿಗೆ ನೀಡುವ ಚುಚ್ಚುಮದ್ದು ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಕಾಲ ಕಾಲಕ್ಕೆ ಅಗತ್ಯವಾದ ಲಸಿಕೆ ನೀಡಬೇಕು, ಯಾವುದೇ ಗರ್ಭಿಣಿ ಮತ್ತು ಶಿಶುಗಳು ಲಸಿಕೆಯಿಂದ ವಂಚಿತರಾಗದಂತೆ ಶೇ.100ರಷ್ಟು ಲಸಿಕೆ ನೀಡಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಕಾಯಕಲ್ಪ ಪ್ರಶಸ್ತಿ ಪಡೆಯಲು ಇರುವ ಮಾನದಂಡಗಳ ಬಗ್ಗೆ ವೈದ್ಯರಿಗಾಗಿ ನಡೆಸಿದ ಜಿಲ್ಲಾ ಮಟ್ಟದ ತರಬೇತಿಯಲ್ಲಿ ಉತ್ತಿರ್ಣರಾದ ವೈದ್ಯರನ್ನು ತಾಲ್ಲೂಕು ಆರೋಗ್ಯ ಸಂಸ್ಥೆಗಳ ಮೆಂಟರ್ ಗಳನ್ನಾಗಿ ನೇಮಿಸಿ ಕಾಯಕಲ್ಪ ಪ್ರಶಸ್ತಿ ಮಾನದಂಡಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿಮಾ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಬಿ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮೋಹನ್ ದಾಸ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಕೇಶವರಾಜ್, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಮಹಾಲಿಂಗಪ್ಪ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!