ಬಾಲ್ಯ ವಿವಾಹ ಪ್ರಕರಣ ದಾಖಲಾಗಬಾರದು

ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ತ್ವರಿತ ನ್ಯಾಯ ಸಿಗಲಿ: ಡೀಸಿ

164

Get real time updates directly on you device, subscribe now.

ತುಮಕೂರು: ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದರು.
ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವನ್ನು ಒದಗಿಸಲಾಗುತ್ತಿದ್ದು, 36.75 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪಿಆರ್ಇಡಿ ವತಿಯಿಂದ ನಿರ್ಮಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್ ಕಟ್ಟಡದ ಉದ್ಘಾಟನೆ ನೆರವೇರಿಸಬೇಕಿದ್ದು, ಈ ಸಂಬಂಧ ಶೀಘ್ರವಾಗಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಿಆರ್ಇಡಿ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸಭೆಗೆ ತಮ್ಮ ಇಲಾಖಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ, ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಸಂಬಂಧ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಲು ವೀಡಿಯೋ ಆನ್ವೀಲ್ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ 205 ಕಡೆ ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸಲಾಗಿದ್ದು, ಒಟ್ಟು 36044 ಜನರು ಕಾರ್ಯಕ್ರಮದ ಪ್ರಯೋಜನ ಪಡೆದಿರುತ್ತಾರೆ ಎಂದು ವಿವರಿಸಿದರು.
ತುಮಕೂರು ಜಿಲ್ಲೆಯಲ್ಲಿ 2021-22ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಒಟ್ಟು 111 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 100 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದ್ದು, 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಉಪನಿರ್ದೇಶಕರು ವಿವರಿಸಿದರು.
ಕೌಟುಂಬಿಕ ದೌರ್ಜನ್ಯ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರಡಿ ಜನವರಿ 2022 ರಿಂದ ಮಾರ್ಚ್ 2022ರವರೆಗೆ 55 ಪ್ರಕರಣಗಳು ಸೇರಿದಂತೆ ಒಟ್ಟು 120 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 50 ಪ್ರಕರಣಗಳನ್ನು, ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ವರ್ಷಾಂತ್ಯದಲ್ಲಿ ಸಂರಕ್ಷಣಾಧಿಕಾರಿ ಹಂತದಲ್ಲಿ 34 ಹಾಗೂ ನ್ಯಾಯಾಲಯ ಹಂತದಲ್ಲಿ 36 ಸೇರಿ ಒಟ್ಟು 70 ಪ್ರಕರಣಗಳು ಬಾಕಿ ಇರುತ್ತವೆ ಎಂದು ತಿಳಿಸಿದರು.
ಸಾಂತ್ವಾನ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 517 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 497 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥಗೊಳಿಸಲಾಗಿದ್ದು, 20 ಪ್ರಕರಣಗಳು ಬಾಕಿ ಇರುತ್ತವೆ ಎಂದರು.
ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ 2021-22ನೇ ಸಾಲಿನಲ್ಲಿ ಒಟ್ಟು 234 ಪ್ರಕರಣ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ತುಮಕೂರು ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಒಟ್ಟು 28 ಪ್ರಕರಣಗಳು ದಾಖಲಾಗಿರುತ್ತವೆ ಎಂದು ಉಪನಿರ್ದೇಶಕ ಶ್ರೀಧರ್ ತಿಳಿಸಿದರು.
ಸಭೆಯಲ್ಲಿ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!