ತುಮಕೂರು: ಜಿಲ್ಲೆಯಲ್ಲಿ ಡಿಸೆಂಬರ್ 5 ರಿಂದ ಹಮ್ಮಿಕೊಂಡಿರುವ ಸರ್ಕಾರಿ, ಖಾಸಗಿ ಶಾಲೆಯ 1 ರಿಂದ 15 ವರ್ಷ ವಯೋಮಾನದ ಮಕ್ಕಳಿಗೆ ಜೆಇ ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದ ಯಶಸ್ವಿಗಾಗಿ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಜೆಇ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿರುವುದರಿಂದ ಯಾವುದೇ ಗೊಂದಲವಾಗದಂತೆ 1 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಲಸಿಕೆ ನೀಡಬೇಕು. ಲಸಿಕೆಯಿಂದ ಯಾವ ಮಗುವೂ ತಪ್ಪಿ ಹೋಗಬಾರದು. ಶಾಲೆ ಬಿಟ್ಟ ಮಕ್ಕಳನ್ನೂ ಪತ್ತೆ ಹಚ್ಚಿ ಲಸಿಕೆ ನೀಡಬೇಕೆಂದು ನಿರ್ದೇಶನ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವದ ಲಸಿಕಾ ಅಭಿಯಾನ ಕಾರ್ಯಕ್ರಮ ಇದಾಗಿದ್ದು, ಅಭಿಯಾನ ಕುರಿತು ನಗರ ಪ್ರದೇಶ ಸೇರಿದಂತೆ ಗ್ರಾಮ ಮಟ್ಟದಲ್ಲಿ ಅಗತ್ಯ ಪ್ರಚಾರ ಕೈಗೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಸರ್ಕಾರಿ, ಖಾಸಗಿ ಶಾಲಾ ಮುಖ್ಯಸ್ಥರ ಸಭೆ ನಡೆಸಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಮನವರಿಕೆ ಮಾಡಬೇಕು. ಶಾಲಾ ಮುಖ್ಯಸ್ಥರು ಮಕ್ಕಳ ಪೋಷಕರ ಸಭೆ ಕರೆದು ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸುವ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 1ರಂದು ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಪ್ರಯುಕ್ತ ತಾಲ್ಲೂಕು ಮಟ್ಟದಲ್ಲಿ ಜಾಥಾ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮ ಏರ್ಪಡಿಸಬೇಕೆಂದು ಸೂಚನೆ ನೀಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, 18 ವರ್ಷ ತುಂಬಿದ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲೆಯಲ್ಲಿ 18 ರಿಂದ 19 ವರ್ಷದೊಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸಲು ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಎಇಆರ್ಓಗಳು ಪದವಿ ಪೂರ್ವ, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈವರೆಗೂ ಮತದಾರರ ಪಟ್ಟಿಗೆ ನೋಂದಾಯಿಸದ ಯುವ ಮತದಾರರನ್ನು ಪತ್ತೆ ಹಚ್ಚಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಮನೆ- ಮನೆಗೆ ಭೇಟಿ ನೀಡಿ ಮರಣ ಹೊಂದಿದವರು, ಸ್ಥಳಾಂತರಗೊಂಡವರು, ಹೊಸ ಮತದಾರರ ನಿಖರ ಮಾಹಿತಿ ಪಡೆದು ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತೆಗೆದು ಹಾಕುವ, ತಿದ್ದುಪಡಿ ಮಾಡುವ ಕಾರ್ಯ ಮಾಡಬೇಕು. ಮರಣ ಹೊಂದಿದವರ ಹೆಸರನ್ನು ನಿರ್ದಿಷ್ಟ ಮಾಹಿತಿ ಪಡೆದ ನಂತರವೇ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆ ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರಲ್ಲದೆ, ಜಿಲ್ಲೆಯಲ್ಲಿರುವ ವಿಶೇಷಚೇತನ ಮತದಾರರನ್ನು ಪತ್ತೆ ಹಚ್ಚಿ ನೋಂದಣಿ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ಕಾಲೇಜುಗಳಲ್ಲಿ ಭಾರತ ಸಂವಿಧಾನ, ಮತದಾನದ ಮಹತ್ವ, ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕಾಲೇಜು ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ನೋಂದಾಯಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ತಿಳಿಸಿದರಲ್ಲದೆ ತಿಪಟೂರು ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಇತ್ತೀಚೆಗೆ ಮೇಣದ ಬತ್ತಿ ಹಚ್ಚಿ ದೀಪ ಬೆಳಗಿಸುವ ಮೂಲಕ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದ ರೀತಿಯಲ್ಲಿ ಉಳಿದ ತಾಲ್ಲೂಕುಗಳಲ್ಲಿಯೂ ಹೊಸ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸಭೆಯಲ್ಲಿ ಆಭಾ ಕಾರ್ಡ್ ವಿತರಣೆ, ಸ್ಮಶಾನ ಭೂಮಿ ಮಂಜೂರು, ವಸತಿ ಯೋಜನೆಯಡಿ ನಿವೇಶನ ಮಂಜೂರು, ಅಭಾ ಕಾರ್ಡ್ ವಿತರಣೆ, ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕಾಕರಣ ಪ್ರಗತಿ ಸೇರಿಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ಆರ್ಸಿಹೆಚ್ ಅಧಿಕಾರಿ ಡಾ. ಕೇಶವರಾಜ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಮೋಹನ್ ದಾಸ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಸನತ್ ಕುಮಾರ್, ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಇತರರು ಇದ್ದರು.
Comments are closed.