ತುಮಕೂರು: ರೈತರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರಾಜ್ಯದಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸಮರ್ಪಕ ಬೆಂಬಲ ಬೆಲೆ ದೊರೆಯುತ್ತಿಲ್ಲ ಹಾಗೂ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಘೋಷಣೆ ಕೂಗಿದರು.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾತನಾಡಿ, ರಾಜ್ಯ ಸರ್ಕಾರ ಪ್ರಸ್ತುತ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. 2018ನೇ ಸಾಲಿನಿಂದ 22ರ ವರೆಗೆ ಮುಂಗಾರಿನ ಹಂಗಾಮಿನ ಬೆಳೆ ನಾಶಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವುದು ಹಾಗೂ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ರೈತರ ಪಂಪ್ ಸೆಟ್ಗಳಿಗೆ ಮೀಟರ್ ಅಳವಡಿಸುವ ಹಾಗೂ ಇನ್ನಿತರೆ ಯೋಜನೆಗಳನ್ನು ಸರ್ಕಾರ ಕೂಡಲೆ ಕೈಬಿಡಬೇಕು. ಅಡಿಕೆ ದರ ಕುಸಿದಿದ್ದು, ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಹಾಲು ಉತ್ಪಾದಕರಿಗೆ ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳುವ ಸರ್ಕಾರ ಹೈನುಗಾರಿಕೆಗೆ ಸಂಬಂಧಿಸಿದ ಬೇರೆ ಪದಾರ್ಥಗಳ ಬೆಲೆ ಹೆಚ್ಚಿಸಿದೆ. ಇದು ರೈತರ ಮೂಗಿಗೆ ತುಪ್ಪ ಸವರುವ ಕೆಲಸವಾಗಿದ್ದು ಅವೈಜ್ಞಾನಿಕ ಪದ್ಧತಿ ಬಿಟ್ಟು ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯಾದ್ಯಂತ ರೈತರ ಹಿತ ಕಾಪಾಡುವಲ್ಲಿ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕೆಂದು ಆಗ್ರಹಿಸಿದರು.
ಮಂಜುನಾಥ್, ಲಕ್ಷ್ಮಿಕಾಂತ್, ಅನಿಲ್ಕುಮಾರ್, ರಂಗಮಣಿ, ವಸುಂದರ, ರೇಣುಕಮ್ಮ, ರಾಧಾ, ಇಂದ್ರ, ಸುಮ, ಶಿವಮ್ಮ, ಮಮತಾ, ರೆಡ್ಡಿ ಲೀಲಾವತಿ, ರೇಖಾ ಭಾಗವಹಿಸಿದ್ದರು.
Comments are closed.