ತುಮಕೂರು: ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸುವ ಮೂಲಕ ನೌಕರರ ಒತ್ತಡ ಕಡಿಮೆ ಮಾಡಿ ಕೆಲಸದಲ್ಲಿ ಹುಮ್ಮಸ್ಸು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಕುಣಿಗಲ್ ರಸ್ತೆಯ ಶ್ರೀಸಿದ್ದಾರ್ಥ ತಾಂತ್ರಿಕ ಮಹಾ ವಿದ್ಯಾಲಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತುಮಕೂರು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘವು ಸುಸಜ್ಜಿತವಾಗಿ ಕ್ರೀಡಾಕೂಟ ಆಯೋಜಿಸಿದೆ. ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು ಮಾತನಾಡಿ, 2023ರ ಫೆಬ್ರವರಿ ಮಾಹೆಯಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಶ್ರದ್ಧೆ ಮತ್ತು ಛಲದಿಂದ ಭಾಗವಹಿಸಬೇಕು. ಆಗ ಗುರಿ ಮುಟ್ಟಲು ಸಾಧ್ಯ. ಕರ್ತವ್ಯ ನಿರ್ವಹಣೆಯಲ್ಲಿ ನೌಕರರಿಗೆ ಅನೇಕ ಒತ್ತಡಗಳಿದ್ದು, ಇದರಿಂದ ಸ್ವಲ್ಪ ಮಟ್ಟಿಗಾದರೂ ಹೊರ ಬರಲು ಕ್ರೀಡೆ ಸಹಾಯಕಾರಿಯಾಗಿದೆ. ಇದರಿಂದ ಒಬ್ಬ ನೌಕರನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ವಂತರಾಗುತ್ತಾನೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ ವಾಡ್, ಉಪ ವಿಭಾಗಾಧಿಕಾರಿ ಅಜಯ್, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ತಹಶೀಲ್ದಾರ್ ಸಿದ್ದೇಶ್, ಮೋಹನ್ ಕುಮಾರ್, ವಾಲಿಬಾಲ್ ತರಬೇತುದಾರ ಪ್ರದೀಪ್ ಕುಮಾರ್, ದೈಹಿಕ ಶಿಕ್ಷಕ ಬಿ.ಜಿ.ಸಂಜು ಇನ್ನಿತರರು ಇದ್ದರು.
Comments are closed.