ತುಮಕೂರು: ಕಲ್ಪತರು ನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗಿದ್ದು, ನಗರದ ವಿವಿಧ ಬಡಾವಣೆಗಳಲ್ಲಿರುವ ಶ್ರೀವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು.
ಇಲ್ಲಿನ ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆಹೆಚ್ಬಿ ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷ್ಮಿ ದೇವಾಲಯ, ಸಿರಾಗೇಟ್ನ ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀಕೋಡಿ ರಂಗನಾಥ ಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯ ಸ್ವಾಮಿ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮಂಗಳವಾರ ಮುಂಜಾನೆಯಿಂದಲೇ ಭಕ್ತಾದಿಗಳು ವೆಂಕಟೇಶ್ವರ ಸ್ವಾಮಿ ದೇವಾಲಯಗಳಿಗೆ ತೆರಳಿ ವೈಕುಂಠ ದರ್ಶನದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಕಾರೋತ್ಸವ ಜರುಗಿದವು.
ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಹಾಗೆಯೇ ದೇವರ ಮೂರ್ತಿಗಳಿಗೂ ವೈಭವೋಪೇತ ಅಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು.
ಭಕ್ತಾದಿಗಳು ಸಹ ಮುಂಜಾನೆಯಿಂದಲೇ ದೇವಾಲಯಗಳಿಗೆ ತೆರಳಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿದ್ದವು. ಈ ಎಲ್ಲಾ ದೇವಾಲಯಗಳಲ್ಲೂ ಭಕ್ತಾದಿಗಳಿಗೆ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ವೆಂಕಟೇಶ್ವರನ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಗೋವಿಂದನ ನಾಮ ಸ್ಮರಣೆ ಮೊಳಗಿದವು.
ನಗರದ ವಿವಿಧ ಬಡಾವಣೆಗಳಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜೆ ನೆರವೇರಿದ್ದು, ಭಕ್ತರಿಗೆ ವೈಕುಂಠ ಏಕಾದಶಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
Comments are closed.