ಮಧುಗಿರಿ: ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ತಮ್ಮ ಸ್ವಗೃಹದಲ್ಲಿ ತಾಲೂಕಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಭೆಯಲ್ಲಿ ಮಾತನಾಡಿ, ಎತ್ತಿನಹೊಳೆ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ಬಹಳಷ್ಟು ತೊಂದರೆಯುಂಟಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಎನ್.ರಾಜಣ್ಣ ಶಾಸಕರಾದರೆ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ವೇಗ ದೊರೆಯಲಿದ್ದು, ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬಹುದು. ತಾಲೂಕಿನಲ್ಲಿ ರೈಲ್ವೆ ಯೋಜನೆ ಅಡಿಯಲ್ಲಿ 28 ಕಿ.ಮೀ ಭೂ ಸ್ವಾಧೀನ ಪ್ರಕ್ರಿಯೆ ನಡೆಸಬೇಕಾಗಿದ್ದು, ಇದುವರೆಗೂ ಒಂದಿಂಚು ಭೂಮಿ ಸ್ವಾಧೀನವಾಗಿಲ್ಲ ಎಂದರು.
ವಿಧಾನ ಪರಿಷತ್ ಅಧಿವೇಶನದಲ್ಲಿ ಕೇರಳ ಮಾದರಿಯಲ್ಲಿ ಗ್ರಾಪಂ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಒತ್ತಾಯಿಸಲಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರ ಗೌರವಧನ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದರು.
ಜನವರಿ 16 ರಂದು ಕಾಂಗ್ರೆಸ್ ಮಹಿಳಾ ಸಮಾವೇಶಕ್ಕೆ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು ತಾಲೂಕಿನಿಂದ ಹೆಚ್ಚು ಮಂದಿ ಮಹಿಳೆಯರು ಸಮಾವೇಶಕ್ಕೆ ತೆರಳುವಂತೆ ಮನವಿ ಮಾಡಿದರು. ಜನವರಿ 25 ರಂದು ಸುದ್ದೆಕುಂಟೆ ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ, ಬಿಜೆಪಿ ಸರ್ಕಾರ ಸೋಲಿನ ಭೀತಿಯಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವುದಕ್ಕೆ ಹಿಂದೇಟು ಹಾಕುತ್ತಿದ್ದು, ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಜನಪರ ಆಡಳಿತ ನಡೆಸಲು ಸಾಧ್ಯ. ಇಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಸದಸ್ಯರು ಒಗ್ಗಟ್ಟಾಗಿ ಕೆ.ಎನ್.ರಾಜಣ್ಣ ಅವರನ್ನು ಗೆಲ್ಲಿಸಿಕೊಳ್ಳಬೇಕು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬೇಡಿ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ.ರಾಜಣ್ಣ ಮಾತನಾಡಿ, ಕೆ.ಎನ್.ರಾಜಣ್ಣನವರ ಸೋಲಿನ ಬಗ್ಗೆ ಜನತೆಗೆ ಪಶ್ಚಾತಾಪವಾಗಿದ್ದು, ಅನುಕಂಪ ಬಂದಿದೆ. ಅದನ್ನು ಬಳಸಿಕೊಳ್ಳಬೇಕು. ಡಿಸಿಸಿ ಬ್ಯಾಂಕ್ ವತಿಯಿಂದ ಮಧುಗಿರಿ ತಾಲೂಕಿನಲ್ಲಿ ನೀಡಿದ್ದ ಬಡ್ಡಿ ರಹಿತ ಸಾಲ, 172 ಕೋಟಿ ರೂ. ಸಾಲ ಮನ್ನಾವಾಗಿದ್ದು ಮತ್ತೆ 200 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸುವಂತೆ ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜುನಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆದಿನಾರಾಯಣ ರೆಡ್ಡಿ, ಗೋಪಾಲಯ್ಯ, ತಾಪಂ ಮಾಜಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಮುಖಂಡರಾದ ಸಿದ್ದಾಪುರ ವೀರಣ್ಣ, ಪೀಟಿ ಗೋವಿಂದಯ್ಯ, ಶನಿವಾರಂ ರೆಡ್ಡಿ, ಸಿಂಗನಹಳ್ಳಿ ಕಾಂತರಾಜು ಮತ್ತಿತರರು ಹಾಜರಿದ್ದರು.
Comments are closed.